ಬೆಂಗಳೂರು, ಡಿ.19- ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಯಾರು ವಿರೋಧಿಸುತ್ತಿರುವರೋ ಅವರೇ ನಿಜವಾದ ಭಯೋತ್ಪಾದಕರು ಎಂದು ಹೇಳಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಯಾರು ಪ್ರತಿಭಟನೆಗೆ ಪ್ರಚೋದನೆ ನೀಡುತ್ತಿದ್ದಾರೋ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಬೇರೆ ಕೆಲಸವಿಲ್ಲದೆ ಈ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದೆ. ಮಾಜಿ ಸಚಿವ ಯು.ಟಿ.ಖಾದರ್ ಹೇಳಿಕೆಯನ್ನು ಖಂಡಿಸಿದ ಅವರು, ಪ್ರಚೋದನೆ ನೀಡುವಂತಹ ರೀತಿಯಲ್ಲಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಐತಿಹಾಸಿಕ ತೀರ್ಮಾನ ಕೈಗೊಳ್ಳುತ್ತಿದೆ. ಅದನ್ನು ಸಹಿಸದೆ ಈ ರೀತಿ ಪ್ರತಿಭಟನೆ ಮಾಡಲಾಗುತ್ತಿದೆ. ಸಿಂಧನೂರಿನಲ್ಲಿ ಕಾಯ್ದೆ ಪರವಾಗಿ ಸಂಭ್ರಮಾಚರಣೆ ಮಾಡಲಾಗಿದೆ. ಕಾಂಗ್ರೆಸ್ನವರು ಶತಮೂರ್ಖರು. ಇವರ ಪ್ರಚೋದನೆಗೆ ಒಳಗಾಗಿ ಪ್ರತಿಭಟನೆ ನಡೆಸಬಾರದು.
ಶಾಂತಿಪ್ರಿಯವಾದ ನಾಡು ನಮ್ಮದು. ಒಂದು ವೇಳೆ ಇದೇ ರೀತಿ ಪ್ರತಿಭಟನೆ ಮುಂದುವರಿದರೆ ಜನ ಕಾಂಗ್ರೆಸ್ಗೆ ತಕ್ಕಪಾಠ ಕಲಿಸುತ್ತಾರೆ ಎಂದರು.
ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್ ಮಾತನಾಡಿ, ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ಕಾಯ್ದೆಯ ಅಧ್ಯಯನ ಮಾಡಬೇಕು. ಅದನ್ನು ವಿರೋಧಿಸುವ ಮೊದಲು ಅದನ್ನು ಅರ್ಥ ಮಾಡಿಕೊಳ್ಳಬೇಕು. ಈ ಕಾಯ್ದೆಯಿಂದಾಗಿ ಯಾವುದೇ ಧರ್ಮ ಅಥವಾ ಸಮಾಜಕ್ಕೆ ತೊಂದರೆಯಾಗುತ್ತಿಲ್ಲ ಎಂದು ತಿಳಿಸಿದರು.