ಬೆಳಗಾವಿ, ಡಿ.22- ಬೆಳಗಾವಿ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗ. ಅದನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ. ಈ ಭೂಮಿ ಇರುವವರೆಗೂ ಬೆಳಗಾವಿ ಕರ್ನಾಟಕದೊಂದಿಗೆ ಇರುತ್ತದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರವಾರ, ಬೆಳಗಾವಿ, ಮಹಾರಾಷ್ಟ್ರ ಭಾಗಕ್ಕೆ ಸೇರಿರುವವು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು 1966ರ ನಿಯಮದಂತೆ ಬೆಳಗಾವಿ ಹಾಗೂ ಗಡಿಭಾಗ ಪ್ರದೇಶಗಳು ಕರ್ನಾಟಕದ ಅವಿಭಾಜ್ಯ ಅಂಗವಾಗಿವೆ. ಯಾವುದೇ ಕಾರಣಕ್ಕೂ ರಾಜ್ಯದಿಂದ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಪೌರತ್ವ ಕಾಯ್ದೆ ತಿದ್ದುಪಡಿ ಸಂಬಂಧ ಪ್ರತಿಭಟನೆಗಳನ್ನು ನಡೆಸುತ್ತಿರುವ ಕಾಂಗ್ರೆಸ್ ವೋಟ್‍ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಬಿಜೆಪಿ ಐಕ್ಯತೆಗಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.
ಮಂಗಳೂರಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೋಲೀಸರು ಅನಿವಾರ್ಯ ಕಾರಣಗಳಿಂದ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.
ದುರುದ್ದೇಶಪೂರ್ವಕವಾಗಿ ಪೋಲೀಸರು ಗೋಲಿಬಾರ್ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅವರು, ಸಿದ್ದರಾಮಯ್ಯನವರು ಕಾಂಗ್ರೆಸ್ ಸಂಸ್ಕøತಿಯನ್ನು ಬಿಂಬಿಸುತ್ತಿದ್ದಾರೆ. ದೇಶದ್ರೋಹ, ಕಾನೂನು ಉಲ್ಲಂಘಿಸುವಂತಹವರ ಮೇಲೆ ಪೋಲೀಸರು ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ಸಮರ್ಥಿಸಿಕೊಂಡರು.