ಪ್ರತಿಭಟನೆಯ ಹಿಂದೆ ಕಾಂಗ್ರೆಸಿಗರ ನೇರ ಕೈವಾಡ-ಸಚಿವ ಕೆ.ಎಸ್.ಈಶ್ವರಪ್ಪ

ಬೆಂಗಳೂರು,ಡಿ.24- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಮಾಯಕ ಮುಸ್ಲಿಮರನ್ನು ಎತ್ತಿಕಟ್ಟುವುದನ್ನು ನಿಲ್ಲಿಸದಿದ್ದರೆ ರಾಜ್ಯದಲ್ಲಿ ಆ ಪಕ್ಷಕ್ಕೆ ಜನತೆ ಅಡ್ರೆಸ್ ಇಲ್ಲದಂತೆ ಮಾಡುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರು ಮತ್ತು ಪದಾಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ಯಾವುದೇ ನಾಗರಿಕರಿಗೆ ತೊಂದರೆಯಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ ಎಂದು ತಿಳಿಸಿದರು.

ಅಮಾಯಕ ಮುಸ್ಲಿಂ ಸಮುದಾಯದವರನ್ನು ಕಾಂಗ್ರೆಸ್ ತಪ್ಪು ದಾರಿಗೆ ಎಳೆಯುತ್ತಿದೆ. ವಿನಾಕಾರಣ ಪ್ರತಿಭಟನೆ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುತ್ತಿದ್ದಾರೆ. ಈ ಪ್ರತಿಭಟನೆಯ ಹಿಂದೆ ಕಾಂಗ್ರೆಸಿಗರ ನೇರ ಕೈವಾಡವಿದೆ ಎಂದು ಆಪಾದಿಸಿದರು.

2018ರ ವಿಧಾನಸಭೆ, ಲೋಕಸಭೆ ಹಾಗೂ ಇತ್ತೀಚೆಗೆ ನಡೆದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲು ಕಂಡಿದೆ. ಸೋಲಿನಿಂದಾದರೂ ಅವರು ಪಾಠ ಕಲಿಯಬೇಕಿತ್ತು. ಇಷ್ಟಾದರೂ ಆ ಪಕ್ಷದ ನಾಯಕರು ಬುದ್ದಿ ಕಲಿತಿಲ್ಲ. ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಡ್ರೆಸ್ಸೇ ಇಲ್ಲಂತಾಗುತ್ತದೆ ಎಂದು ಕುಹಕವಾಡಿದರು.

ದೇಶದಲ್ಲಿ ಬಿಜೆಪಿ ಕ್ಷೀಣಿಸುತ್ತಿದೆ ಎಂದು ಕಾಂಗ್ರೆಸಿಗರು ಹೇಳುತ್ತಿದ್ದಾರೆ. ಕೇಂದ್ರ ಮತ್ತು ಅನೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದೆ ಎಂಬುದನ್ನು ಮರೆಯಬಾರದು. ಕಡೆ ಪಕ್ಷ ನಮ್ಮ ಪಕ್ಷದ ಬಗ್ಗೆ ಮಾತನಾಡುವಷ್ಟಾದರೂ ನಿಮಗೆ ಧ್ವನಿ ಇದೆಯಲ್ಲಾ ಎಂಬುದೇ ಸಂತೋಷ. ಮೊದಲು ನಿಮ್ಮ ವೋಟ್ ಬ್ಯಾಂಕ್ ರಾಜಕಾರಣವನ್ನು ನಿಲ್ಲಿಸಿ ಎಂದು ತಾಕೀತು ಮಾಡಿದರು.

ಹಿಂದೆ ಬ್ರಿಟಿಷರು ಭಾರತ ಮತ್ತು ಪಾಕಿಸ್ತಾನವನ್ನು ವಿಭಜನೆ ಮಾಡಿ ಯಶಸ್ವಿಯಾಗಿದ್ದರು. ಇಂದು ಕಾಂಗ್ರೆಸಿಗರು ಹಿಂದೂ ಮತ್ತು ಮುಸ್ಲಿಮರನ್ನು ವಿಭಜಿಸಲು ಮುಂದಾಗಿದ್ದಾರೆ. ಇದರಲ್ಲಿ ನೀವು ಎಂದೂ ಯಶಸ್ವಿಯಾಗುವುದಿಲ್ಲ. ನಿಮ್ಮ ದುರಾಡಳಿತಕ್ಕೆ ಈಗಾಗಲೇ ದೇಶದ ಜನರು ತೀರ್ಪು ನೀಡಿದ್ದಾರೆ. ಇನ್ನೂ ಏಕೆ ಇಂಥ ನೀಚ ರಾಜಕಾರಣ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.

ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬ್ಲಾಂಗ್ಲಾದೇಶದಿಂದ ವಲಸೆ ಬಂದಿರುವ ಸಿಖ್, ಪಾರ್ಸಿ, ಬೌದ್ಧರು ಸೇರಿದಂತೆ ಆರು ಸಮುದಾಯದವರಿಗೆ ಭಾರತೀಯ ಪೌರತ್ವವನ್ನು ನೊಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಆದರೂ ಕಾಂಗ್ರೆಸ್ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶೀಘ್ರ ವಿಸ್ತರಣೆ:
ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್, ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿದ್ದ ರಾಜೀನಾಮೆ ನೀಡಿದ್ದರಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪನವರೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಉಪಚುನಾವಣೆಯಲ್ಲಿ ಗೆದ್ದಿರುವವರಿಗೆ ಮಂತ್ರಿ ಸ್ಥಾನ ನೀಡಲಾಗುವುದು, ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ. ಮುಖ್ಯಮಂತ್ರಿಗಳು ಆದಷ್ಟು ಶೀಘ್ರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ. ಎಲ್ಲವೂ ಸುಖ್ಯಾಂತ ಕಾಣಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಗೆ ರಾಜ್ಯದ ಜನತೆ ಶೀಘ್ರದಲ್ಲೇ ಅಡ್ರೆಸ್ ತೋರಿಸುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಈಶ್ವರಪ್ಪ, ತುಮಕೂರಿನಲ್ಲಿ ಅಪ್ಪ (ದೇವೇಗೌಡರು), ಮಂಡ್ಯದಲ್ಲಿ ಮಗ(ನಿಖಿಲ್ ಕುಮಾರಸ್ವಾಮಿ)ನನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಮೊದಲು ನಿಮ್ಮ ಅಡ್ರೆಸ್ ಎಲ್ಲಿದೆ ಎಂದು ಹುಡುಕಿಕೊಳ್ಳಿ ಎಂದು ವ್ಯಂಗ್ಯವಾಡಿದರು.

ಇದಕ್ಕೂ ಮುನ್ನ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳನ್ನು ಭೇಟಿಯಾದ ಈಶ್ವರಪ್ಪ ಅಹವಾಲುಗಳನ್ನು ಸ್ವೀಕರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ