ಬೆಂಗಳೂರು, ಡಿ.25-ಉಸಿರಾಟದ ತೊಂದರೆಯಿಂದ ಕಳೆದ ನಾಲ್ಕು ದಿನಗಳಿಂದ ಮಣಿಪಾಲದ ಕಸ್ತೂರಿಬಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಯವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂದಿದೆ.
ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಿದ್ದು, ವೆಂಟಿಲೇಟರ್ ಮೂಲಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ರೋಗ ನಿರೋಧಕ ಔಷಧಿಗಳನ್ನು ನೀಡಲಾಗುತ್ತಿದ್ದು, ಶ್ರೀಗಳ ದೇಹದಲ್ಲಿರುವ ಗಟ್ಟಿ ಕಫ ನಿಧಾನವಾಗಿ ಕರಗುತ್ತಿದ್ದು, ಆರೋಗ್ಯದಲ್ಲಿ ಸುಧಾರಣೆಯಾಗುತ್ತಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಾದ ಡಾ.ಸುಧಾ ವಿದ್ಯಾಸಾಗರ್ ಹಾಗೂ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ಶೆಟ್ಟಿ ಅವರು ತಿಳಿಸಿದ್ದಾರೆ.
ದೆಹಲಿಯ ಏಮ್ಸ್ ಆಸ್ಪತ್ರೆಯಿಂದಲೂ ಕೂಡ ಇಬ್ಬರು ತಜ್ಞ ವೈದ್ಯರು ಆಗಮಿಸಿದ್ದು, ಶ್ರೀಗಳ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.
ಅವರ ಆರೋಗ್ಯದ ಕ್ಷಣ ಕ್ಷಣದ ಮಾಹಿತಿಗಳನ್ನು ಬಿಡುಗಡೆ ಮಾಡುತ್ತಿದ್ದಾರೆ. ಈಗಾಗಲೇ ಶ್ರೀಗಳಿಂದ ದೀಕ್ಷೆ ಪಡೆದ ಉಮಾಭಾರತಿ, ಉದ್ಯಮಿ ಮೀರಾ ರಾಡಿಯ, ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗಡೆ, ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್, ಸಚಿವರಾದ ಈಶ್ವರಪ್ಪ, ಮಾಜಿ ಸಚಿವ, ಶಾಸಕ ಯು.ಟಿ.ಖಾದರ್,ಎಂ.ಬಿ.ಪಾಟೀಲ್, ಜಮೀರ್ ಅಹಮ್ಮದ್ ಖಾನ್ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ್ದಾರೆ.