ರಾಂಚಿ, ಡಿ.29- ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಜೆಎಂಎಂ ಕಾರ್ಯಾಧ್ಯಕ್ಷ ಹೇಮಂತ ಸೊರೆನ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜಧಾನಿ ರಾಂಚಿಯ ಮೊಹರಾಬಾದಿ ಮೈದಾನದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರು ನೂತನ ಮುಖ್ಯಮಂತ್ರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಜಾರ್ಖಂಡ್ ಮುಕ್ತಿ ಮೋರ್ಚಾದ ಅಗ್ರ ನಾಯಕರಾದ 44 ವರ್ಷದ ಹೇಮಂತ ಸೊರೆನ್ ಎರಡನೆ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಅಲಾಂಗಿರ್ ಅಲಂ, ಕಾಂಗ್ರೆಸ್ ರಾಜ್ಯಾಧ್ಯಕ್ಷ ರಾಮೇಶ್ವರ ಒರಾಯನ್ ಮತ್ತು ಆರ್ಜೆಡಿ ಶಾಸಕ ಸತ್ಯಾನಂದ್ ಬೋಗ್ಟಾ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಜೆಎಂಎಂ-ಕಾಂಗ್ರೆಸ್-ಆರ್ಜೆಡಿ ಮೈತ್ರಿ ಕೂಟದ ನಾಯಕರುಗಳು ಮತ್ತು ಅಸಂಖ್ಯಾತ ಕಾರ್ಯಕರ್ತರು ಪಾಲ್ಗೊಂಡರು.
81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಈ ಮೈತ್ರಿ ಕೂಟ 47 ಸ್ಥಾನಗಳೊಂದಿಗೆ ಬಹುಮತ ಗಳಿಸಿ ಅಧಿಕಾರಕ್ಕೆ ಬಂದಿದೆ.