ಬೆಂಗಳೂರು,ಡಿ.30-ರಾಜ್ಯದ ವಿಧಾನಮಂಡಲದ ಜಂಟಿ ಅಧಿವೇಶನ ಫೆ.17ರಿಂದ ಪ್ರಾರಂಭವಾಗಲಿದ್ದು, ಮಾ.5ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದರು.
ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಫೆ.17ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆ.17ರಿಂದ 21ರವರೆಗೆ ಜಂಟಿ ಅಧಿವೇಶನ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ಜನವರಿಯಲ್ಲಿ ನಡೆಸಬೇಕಿದ್ದ ಜಂಟಿ ಅಧಿವೇಶನವನ್ನು ಫೆಬ್ರವರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದ ಅವರು, ಮಾ.2ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮಾ.5ರಂದು 2020-21ನೇ ಸಾಲಿನ ಆಯವ್ಯಯ ಮಂಡನೆಯಾಗಲಿದೆ.
ಆಯವ್ಯಯ ಮಂಡನೆ ಮೇಲೆ ವಿವರವಾದ ಚರ್ಚೆ ಉಭಯಸದನಗಳಲ್ಲಿ ನಡೆಸಿ ಅನುಮೋದನೆ ಪಡೆಯುವ ಉದ್ದೇಶವಿದೆ ಎಂದರು.
2020ರ ನವೆಂಬರ್ 3ರಿಂದ 5ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಅವರು ಹೇಳಿದರು.
ಸಂಪುಟ ವಿಸ್ತರಣೆ: ಈ ನಡುವೆ ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಸಂಕ್ರಾಂತಿ ನಂತರ ನಡೆಯಲಿದೆ ಎಂದು ಈಗ ವಿಶ್ಲೇಷಿಸಲಾಗುತ್ತಿದೆ.
ಈ ಹಿಂದೆ ಜ.20ರಿಂದ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಮುಖ್ಯಮಂತ್ರಿಗಳು ವಿದೇಶ ಪ್ರವಾಸ ಹಾಗೂ ಇತರೆ ಕಾರಣಗಳಿಂದಾಗಿ ಮುಂದೂಡಲಾಗಿದ್ದು , ಸಂಪುಟ ವಿಸ್ತರಣೆಗೆ ಸಾಕಷ್ಟು ಸಮಯಾವಕಾಶ ಸಿಗಲಿದೆ ಎನ್ನಲಾಗುತ್ತಿದೆ.