ಅಭ್ಯರ್ಥಿಗಳ ವಿರುದ್ಧದ ಕ್ರಿಮಿನಲ್ ಕೇಸ್ ಗಳ ವಿವರ ಬಹಿರಂಗಗೊಳಿಸಿ;ರಾಜಕೀಯ ಪಕ್ಷಕ್ಕೆ ಸುಪ್ರೀಂ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ(ನಾಯಕರ) ವಿರುದ್ಧ ದಾಖಲಾಗಿರುವ ಅಪರಾಧಗಳ ವಿವರಗಳನ್ನು ಸಂಬಂಧಪಟ್ಟ ವೆಬ್ ಸೈಟ್ ನಲ್ಲಿ ದಾಖಲಿಸುವಂತೆ ಸುಪ್ರೀಂಕೋರ್ಟ್ ಗುರುವಾರ ಎಲ್ಲಾ ರಾಜಕೀಯ ಪಕ್ಷಗಳಿಗೆ ಆದೇಶ ನೀಡಿದೆ.

ರಾಜಕೀಯದಲ್ಲಿ ಅಪರಾಧ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ವಿರುದ್ಧ ದಾಖಲಾಗಿರುವ ಅಪರಾಧಗಳನ್ನು ಬಹಿರಂಗಗೊಳಿಸಲು ಸುಪ್ರೀಂಕೋರ್ಟ್ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿ 2018ರಲ್ಲಿ ಅಪೆಕ್ಸ್ ಕೋರ್ಟ್ ತೀರ್ಪು ನೀಡಿತ್ತು.

2018ರಲ್ಲಿ ಸುಪ್ರೀಂಕೋರ್ಟ್ ಕೊಟ್ಟ ತೀರ್ಪನ್ನು ರಾಜಕೀಯ ಪಕ್ಷಗಳು ಪಾಲಿಸಿಲ್ಲ ಎಂದು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿ ಈ ಆದೇಶವನ್ನು ಹೊರಡಿಸಿದೆ ಎಂದು ವರದಿ ತಿಳಿಸಿದೆ.

ಕಳೆದ ನಾಲ್ಕು ಸಾರ್ವತ್ರಿಕ ಚುನಾವಣೆಗಳಲ್ಲಿ ರಾಜಕೀಯ ಅಪರಾಧ ಹೆಚ್ಚಳವಾಗುತ್ತಿರುವುದು ಎಚ್ಚರಿಕೆಯ ಗಂಟೆಯಾಗಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದ್ದು, ಒಂದು ವೇಳೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ವಿರುದ್ಧ ಬಾಕಿ ಉಳಿದಿರುವ ಕ್ರಿಮಿನಲ್ ಪ್ರಕರಣಗಳ ಮಾಹಿತಿ ದಾಖಲಿಸಲು ವಿಫಲರಾದರೆ, ಚುನಾವಣಾ ಆಯೋಗ ಸುಪ್ರೀಂಕೋರ್ಟ್ ಗಮನಕ್ಕೆ ತರಬೇಕು ಎಂದು ತಿಳಿಸಿದೆ.

ಅಭ್ಯರ್ಥಿಗಳ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಬಗ್ಗೆ ರಾಜಕೀಯ ಪಕ್ಷಗಳ ವೆಬ್ ಸೈಟ್ ನಲ್ಲಿ ವಿವರ ದಾಖಲಿಸಬೇಕು. ಅಲ್ಲದೇ ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಮಾಹಿತಿ ಬಹಿರಂಗಪಡಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ