ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಭಗಿಲೆದ್ದ ಹಿಂಸಾಚಾರ ತಾರರಕ್ಕೇರಿದ್ದು ಇದೊಂದು ಎಚ್ಚರಿಕೆಯ ಗಂಟೆಯಾಗಿದೆ. ಎಲ್ಲಾ ಪ್ರಯತ್ನದ ನಡುವೆಯೂ ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿ ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೂಡಲೇ ಸೇನೆಯನ್ನು ರವಾನಿಸಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿರುವುದಾಗಿ ವರದಿ ತಿಳಿಸಿದೆ.
ಮಂಗಳವಾರ ರಾತ್ರಿ ನಾನು ಹಲವು ಜನರ ಜತೆ ಸಂಪರ್ಕದಲ್ಲಿದ್ದೆ. ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಎಲ್ಲಾ ಪ್ರಯತ್ನದ ನಡುವೆಯೇ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಕೂಡಲೇ ಕೇಂದ್ರ ಸೇನೆಯನ್ನು ಕಳುಹಿಸಬೇಕು. ಅಲ್ಲದೇ ಇನ್ನುಳಿದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ಫ್ಯೂ ಜಾರಿಗೊಳಿಸಬೇಕು. ಈ ಬಗ್ಗೆ ನಾನು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿರುವುದಾಗಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಬುಧವಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ರಕ್ಷಣಾ ಕ್ಯಾಬಿನೆಟ್ ಸಮಿತಿಯ ಸಭೆಯಲ್ಲಿ ಪಾಲ್ಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿಯವರಿಗೆ ದೆಹಲಿ ಪರಿಸ್ಥಿತಿ ಕುರಿತು ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.