ಬೆಂಗಳೂರು: ಕುಡಿಯುವ ನೀರಿಗಾಗಿ ಹೋರಾಟ ಮಾಡುತ್ತಿದ್ದ ಉತ್ತರ ಕರ್ನಾಟಕ ಜನರ ದಾಹ ತಣಿಸುವ ಕಾಲ ಬಂದಿದೆ. ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೊನೆಗೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದರ ಅನ್ವಯ ಕರ್ನಾಟಕ ಮಹದಾಯಿ ನದಿಯಿಂದ 13.05 ಟಿಎಂಸಿ ನೀರು ಬಳಸಬಹುದಾಗಿದೆ.
ಕೇಂದ್ರದ ನಿರ್ಧಾರದಿಂದ ಉತ್ತರ ಕರ್ನಾಟಕ ಭಾಗಕ್ಕೆ ಅದರಲ್ಲೂ ಮಹದಾಯಿ ಅಚ್ಚುಕಟ್ಟು ವ್ಯಾಪ್ತಿಯ ಜನಕ್ಕೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಕೆಲ ದಿನಗಳ ಹಿಂದೆ ಮಹದಾಯಿ ನದಿ ನೀರು ಹಂಚಿಕೆ ಕುರಿತು ತೀರ್ಪು ಪ್ರಕಟವಾಗಿತ್ತು. ಈ ತೀರ್ಪಿನ ಅನ್ವಯ ಕೇಂದ್ರ ಸರ್ಕಾರ ಗೆಜೆಟ್ ಪ್ರಕಟಣೆ ಹೊರಡಿಸಿದೆ. ಮೊನ್ನೆಯಷ್ಟೇ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಸೇಖಾವತ್ರನ್ನು ಭೇಟಿ ಮಾಡಿದ್ದ ರಾಜ್ಯ ಬಿಜೆಪಿ ನಾಯಕರು ಅಧಿಸೂಚನೆ ಹೊರಡಿಸುವಂತೆ ಒತ್ತಡ ಹೇರಿದ್ದರು. ಇದರ ಬೆನ್ನಲ್ಲೇ ಮಹಾ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಿದೆ. ವಿರೋಧದ ನಡುವೆಯೂ ರಮೇಶ್ ಜಾರಕಿಹೊಳಿ ನೀರಾವರಿ ಖಾತೆ ವಹಿಸಿಕೊಂಡಿರುವ ಹೊತ್ತಲ್ಲೇ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವುದು ಮಹತ್ವ ಪಡೆದಿದೆ.
ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುತ್ತಿದ್ದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಬಹು ನಿರೀಕ್ಷಿತ ಮಹಾದಾಯಿ ನದಿ ನೀರಿನ ಹಂಚಿಕೆಯ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ ಪ್ರಕಟಣೆ ಹೊರಡಿಸಿದೆ. ಮೊನ್ನೆ ಕೇಂದ್ರ ಜಲ ಶಕ್ತಿ ಸಚಿವರನ್ನು ಭೇಟಿ ಮಾಡಿ ಇದರ ಬಗ್ಗೆಯೇ ಚರ್ಚಿಸಿದ್ದೆವು. ಕರ್ನಾಟಕದ ಮನವಿಗೆ ಸ್ಪಂದಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಸಂಪನ್ಮೂಲ ಸಚಿವರಿಗೆ ವಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.
ಮಹದಾಯಿ ಯೋಜನೆಗೆ ಮೊದಲಿನಿಂದಲೂ ಕ್ಯಾತೆ ತೆಗೆಯುತ್ತಿದ್ದ ಗೋವಾ ಸರ್ಕಾರಕ್ಕೆ ಕೇಂದ್ರದ ನಿರ್ಧಾರದಿಂದ ಮುಖಭಂಗವಾಗಿದೆ. ಕಳಸಾ ಬಂಡೂರಿ ಯೋಜನೆಯಿಂದ ಅರಣ್ಯ ಸಂಪತ್ತಿಗೆ ಧಕ್ಕೆಯಾಗಲಿದೆ. ಅಲ್ಲದೇ ಗೋವಾಗೂ ಅನ್ಯಾಯವಾಗುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಮಹದಾಯಿ ಕಣಿವೆ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸಲು ಅನುಮತಿ ನೀಡದಂತೆ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದೆ. ಸೋಮವಾರದಿಂದ ಈ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆಗೆ ಬರಲಿದೆ.