ನಿವೃತ್ತ CJI ಗೋಗೊಯಿ ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ; ಹೊರನಡೆದ ವಿಪಕ್ಷಗಳು

ನವದೆಹಲಿ: ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯಿ ಅವರು ಗುರುವಾರ ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದರು.

ಕಾಂಗ್ರೆಸ್ ಮತ್ತು ಇತರ ವಿಪಕ್ಷಗಳು ಶೇಮ್, ಶೇಮ್ ಎಂದು ಘೋಷಣೆ ಕೂಗುತ್ತಿದ್ದು, ಇದರ ನಡುವೆಯೇ ರಂಜನ್ ಗೋಗೊಯಿ ಪ್ರಮಾಣವಚನ ಸ್ವೀಕರಿಸಿದರು. ಏತನ್ಮಧ್ಯೆ ಸಮಾಜವಾದಿ ಪಕ್ಷವನ್ನು ಹೊರತುಪಡಿಸಿ ಉಳಿದ ಎಲ್ಲಾ ವಿಪಕ್ಷಗಳು ಪ್ರಮಾಣವಚನ ಬಹಿಷ್ಕರಿಸಿ ಹೊರನಡೆದ ಘಟನೆ ನಡೆಯಿತು.

ಮಾಜಿ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ ವಿವಿಧ ರಂಗದಲ್ಲಿ ಸೇವೆ ಸಲ್ಲಿಸಿದ ಗಣ್ಯರು ರಾಜ್ಯಸಭೆಗೆ ಆಯ್ಕೆಯಾಗಿದ್ದ ದೊಡ್ಡ ಸಂಪ್ರದಾಯ ನಮ್ಮದಾಗಿದೆ. ಈ ನಿಟ್ಟಿನಲ್ಲಿ ಜಸ್ಟೀಸ್ ಗೋಗೊಯಿ ಅವರು ಕೂಡಾ ಇಂದು ಪ್ರಮಾಣವಚನ ಸ್ವೀಕರಿಸುವ ಮೂಲಕ ಉತ್ತಮ ಕೊಡುಗೆ ನೀಡಲಿದ್ದಾರೆ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದ ಸದಸ್ಯರು ಕಲಾಪ ಬಹಿಷ್ಕರಿಸಿ ಹೊರನಡೆದಿರುವುದಾಗಿ ವರದಿ ತಿಳಿಸಿದೆ.

ಈ ಸಭೆಗೆ ಆಯ್ಕೆಯಾಗುವವರಿಗೆ ಪ್ರಮಾಣೀಕೃತ ಕಾನೂನು ಮತ್ತು ನಡಾವಳಿಗಳಿವೆ. ಇಂತಹ ಸಂದರ್ಭದಲ್ಲಿ ವಿಪಕ್ಷಗಳ ಈ ಕ್ರಮ ಸೂಕ್ತವಾದುದಲ್ಲ ಎಂದು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅಸಮಾಧಾನ ವ್ಯಕ್ತಪಡಿಸಿದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ