ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಮಾ. 27ರಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಈಗಾಗಲೇ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಗಳನ್ನು ಮುಂದೂಡಲಾಗಿದೆ. 6ನೇ ತರಗತಿಯವರೆಗಿನ ಮಕ್ಕಳಿಗೆ ಪರೀಕ್ಷೆಯನ್ನೇ ರದ್ದು ಮಾಡಿ, ರಜೆ ಘೋಷಿಸಲಾಗಿದೆ. ಇದೇ ತಿಂಗಳ 27ರಿಂದ ಏಪ್ರಿಲ್ 9ರವರೆಗೆ ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಬೇಕಾಗಿತ್ತು. ಇದೀಗ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹಾಗೇ, ಎಲ್ಲ ಚುನಾವಣೆಗಳನ್ನು ಕೂಡ ಮುಂದೂಡಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಕಷ್ಟ. ಕೊರೋನಾ ಸೋಂಕು ಹರಡುವುದನ್ನು ತಡೆಯುವುದೇ ನಮ್ಮ ಮುಂದಿರುವ ದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಈ ತಿಂಗಳ 27ರಿಂದ ನಡೆಯಬೇಕಿದ್ದ 10ನೇ ತರಗತಿ ಪರೀಕ್ಷೆ ಸೇರಿ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
15 ದಿನಗಳ ಕಾಲ ಯಾರೂ ಬೇರೆ ಊರುಗಳಿಗೆ ಪ್ರಯಾಣ ಮಾಡಬೇಡಿ. ಇಂದು ಮಾತ್ರ ಜನತಾ ಕರ್ಫ್ಯೂ ಜಾರಿಯಲ್ಲಿದ್ದು, ನಾಳೆಯಿಂದ ಎಂದಿನಂತೆ ದಿನಸಿ, ತರಕಾರಿ, ಅಗತ್ಯ ವಸ್ತುಗಳ ಅಂಗಡಿಗಳು ತೆರೆದಿರುತ್ತವೆ. ಎಲ್ಲ ಖಾಸಗಿ ಆಸ್ಪತ್ರೆಗಳಲ್ಲೂ ಕೊರೋನಾ ವೈರಸ್ ಪರೀಕ್ಷೆಗೆ ಲೈಸೆನ್ಸ್ ನೀಡಲು ತೀರ್ಮಾನ ಮಾಡಲಾಗಿದೆ. ರಾಜ್ಯದ ಗಡಿ ಭಾಗಗಳಲ್ಲಿ ವಾಹನಗಳ ಓಡಾಟವನ್ನು ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಬೇರೆ ರಾಜ್ಯಗಳಿಂದ ನಮ್ಮ ರಾಜ್ಯಗಳಿಗೆ ಪ್ರಯಾಣ ಮಾಡುವವರಿಂದ ಕೊರೋನಾ ವೈರಸ್ ಹರಡುವ ಸಾಧ್ಯತೆ ಇರುವುದರಿಂದ ಗಡಿಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.