ಹೊಸದಿಲ್ಲಿ: ಕೊರೋನಾವೈರಸ್ ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಸೂಚನೆಯನ್ನು ಪಾಲಿಸುವಂತೆ ಮತ್ತು ಸ್ವಯಂ ಐಸೋಲೆಷನ್ ಪಾಲಿಸುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿರುವ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ. ಆರ್. ರೆಹಮಾನ್, ಇದು ಧಾರ್ಮಿಕ ಸ್ಥಳಗಳಲ್ಲಿ ಗುಂಪು ಸೇರಿ ಅವ್ಯವಸ್ಥೆಯನ್ನುಂಟುಮಾಡುವ ಸಮಯವಲ್ಲ ಎಂದು ಎಚ್ಚರಿಸಿದ್ದಾರೆ.
ದೇಶಾದ್ಯಂತ ಕೋವಿಡ್ 19 ಸೋಂಕು ಹರಡುವಲ್ಲಿ ದಿಲ್ಲಿಯ ನಿಜಾಮುದ್ದೀನ್ ಧಾರ್ಮಿಕ ಕೇಂದ್ರದಲ್ಲಿ ಕಳೆದ ತಿಂಗಳು ನಡೆದಿದ್ದ ತಬ್ಲಿಘಿ ಜಮಾತ್ ಸಭೆಯಲ್ಲಿ ಸಾವಿರಾರು ಜನರು ಸರಕಾರದ ಲಾಕ್ಡೌನ್ ಆದೇಶ ಉಲ್ಲಂಘಿಸಿ ಸೇರಿ ಅವಾಂತರ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ರೆಹಮಾನ್ ಅವರ ಈ ಹೇಳಿಕೆ ಹೊರಬಿದ್ದಿದೆ.ಮಾರಕ ಸೋಂಕಿಗೆ ತುತ್ತಾದವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ನರ್ಸ್ ಗಳು ಹಾಗೂ ಎಲ್ಲಾ ಸಿಬ್ಬಂದಿಗಳ ನಿಸ್ವಾರ್ಥ ಸೇವೆ ಹಾಗೂ ಧೈರ್ಯಕ್ಕೆ ಅವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಮಾರಕ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ಜನರು ಒಗ್ಗೂಡುವಂತೆ ಮನವಿ ಮಾಡಿಕೊಂಡಿದ್ದಾರೆ.