ಬೆಂಗಳೂರು, ಏ.6- ರಾಜ್ಯದ ಉತ್ತರ ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ನಿನ್ನೆ ಉತ್ತಮ ಮಳೆಯಾಗಿದ್ದು, ಮಂಗಾರು ಪೂರ್ವ ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಗಳಿವೆ.
ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ಕೆಲವೆಡೆ ಗುಡುಗು ಮಿಂಚಿನಿಂದ ಕೂಡಿದ ಭಾರೀ ಮಳೆಯಾಗಿದೆ. ಮತ್ತೆ ಕೆಲವೆಡೆ ಆಲಿಕಲ್ಲು, ಬಿರುಗಾಳಿ, ಗುಡುಗು-ಸಿಡಿಲಿನಿಂದ ಕೂಡಿದ ಮಳೆಯಾದ ವರದಿಯಾಗಿದೆ.
ಕೇರಳದಿಂದ ಉತ್ತರ ಕರ್ನಾಟಕದವರೆಗೂ ಟ್ರಪ್ ನಿರ್ಮಾಣವಾಗಿರುವ ಪರಿಣಾಮ ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ. ಜಿ. ಎಸ್ .ಶ್ರೀನಿವಾಸರೆಡ್ಡಿ ತಿಳಿಸಿದರು.
ವಾಯುಭಾರ ಕುಸಿತವಾದ ಕಡೆಗಳಲ್ಲಿ ಉತ್ತಮವಾದ ಮಳೆಯಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಯಚೂರು, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ ಎಂದರು.
ಹವಾ ಮುನ್ಸೂಚನೆ ಪ್ರಕಾರ ರಾಜ್ಯದ ಒಳನಾಡಿನಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಬೆಂಗಳೂರಿಗೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದರು.
ಪಶ್ಚಿಮದ ಕಡೆ ಇರುವ ಟ್ರಪ್ ಪೂರ್ವದ ಕಡೆಗೆ ಚಲಿಸಿದರೆ ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಬಹುದು. ಇಲ್ಲದಿದ್ದರೆ ಸಾಧಾರಣ ಮಳೆಯಾಗಬಹುದು ಎಂದರು.
ಮುಂಗಾರು ಪೂರ್ವ ಮಳೆ ಏಪ್ರಿಲ್-ಮೇನಲ್ಲಿ ಬರುವುದು ವಾಡಿಕೆ. ಅದರಂತೆ ಈ ಬಾರಿಯೂ ಸಾಧಾರಣ ಪ್ರಮಾಣದ ಮಳೆಯಾಗುವ ಸಂಭವವಿದೆ ಎಂದು ಹೇಳಿದರು.
ಕಳೆದ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದ ಮುಂಗಾರು ಪೂರ್ವ ಮಳೆಯಾಗಿದೆ. ಮೇ ಅಂತ್ಯದವರೆಗೂ ಮುಂಗಾರು ಪೂರ್ವ ಮಳೆಯಾಗಲಿದ್ದು, ವಾಡಿಕೆ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗುತ್ತಿದೆ ಎಂದರು.