ಅ. 21ರಂದು ಅತಿವೃಷ್ಟಿ ತಾಲೂಕುಗಳ ವೈಮಾನಿಕ ಸಮೀಕ್ಷೆ

ಶಿಕಾರಿಪುರ : ಉತ್ತರ ಕರ್ನಾಟಕದ ಅತಿವೃಷ್ಟಿ ತಾಲೂಕುಗಳ ವೈಮಾನಿಕ ಸಮೀಕ್ಷೆಯನ್ನು ಅ. 21ರಂದು ನಡೆಸಲಿದ್ದೇನೆ. ಪ್ರಧಾನಮಂತ್ರಿ ಅವರು ನೆರೆಪೀಡಿತ ಪ್ರದೇಶಗಳಿಗೆ ಎಲ್ಲಾ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಶಿಕಾರಿಪುರದ ಸಾಂಸ್ಕøತಿಕ ಭವನದಲ್ಲಿ ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರ ಹೊಲಗಳಿಗೆ ನೀರು ಹರಿಸುವ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.
ಶಿಕಾರಿಪುರದಲ್ಲಿ ಚಾಲನೆ ನೀಡಲಾಗಿರುವ ಕಲ್ಲೊಡ್ಡು ಏತನೀರಾವರಿ ಯೋಜನೆಯಿಂದಾಗಿ ಶಿಕಾರಿಪುರ ಹಾಗೂ ಸೊರಬ ತಾಲೂಕುಗಳ 3,730 ಹೆಕ್ಟೇರ್ ಪ್ರದೇಶಗಳಿಗೆ ನೀರಾವರಿ ಸಾಧ್ಯವಾಗಲಿದೆ. ಯೋಜನೆಯಿಂದ 41 ಕೆರೆಗಳಿಗೆ ಸಹ ನೀರು ತುಂಬಿಸಲಾಗುತ್ತಿದೆ. ತಾಳಗುಂದ ಹೊಸೂರು ಏತ ನೀರಾವರಿ ಯೋಜನೆ ಈಗಾಗಲೇ ಅನುಷ್ಠಾನಗೊಳ್ಳುತ್ತಿದ್ದು, ಇದರಿಂದ 230 ಕೆರೆಗಳಿಗೆ ನೀರು ತುಂಬಿಸಲು ಸಾಧ್ಯವಾಗಲಿದೆ. ಮುಂದಿನ ವರ್ಷ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಅಕ್ಕಮಹಾದೇವಿ ಜನ್ಮಸ್ಥಳವಾದ ಉಡುತಡಿಯನ್ನು ಪುಣ್ಯಕ್ಷೇತ್ರ ಹಾಗೂ ಪ್ರವಾಸಿ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿ ಪಡಿಸಲು ನಾವು ಬದ್ಧರಾಗಿದ್ದು ಈಗಾಗಲೇ ಕಾಮಗಾರಿ ಆರಂಭವಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಮುಂದಿನ ಮೂರು ವರ್ಷಗಳಲ್ಲಿ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸುವ ಮನೆಮನೆಗೆ ಗಂಗೆ ಯೋಜನೆಯನ್ನು ಕೇಂದ್ರ ಸರಕಾರದ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ