ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿಯಾಗಲಿದೆ. ಮುಂಬರುವ ದಿನದಲ್ಲಿ ಕಾಂಗ್ರೆಸ್ ಅಕಾರಕ್ಕೆ ಬಂದೇ ಬರುತ್ತದೆ ಎಂಬ ವಿಶ್ವಾಸವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಕ್ತಪಡಿಸಿದರು.
ಶಿರಾ ತಾಲೂಕು ಕಳ್ಳಂಬೆಳ್ಳ ಹೋಬಳಿ ಯತ್ತಪ್ಪನಹಟ್ಟಿ, ದೊಡ್ಡ ಅಗ್ರಹಾರ, ತರೂರು ಸೇರಿದಂತೆ ಸುತ್ತಮುತ್ತ ಕಾಂಗ್ರೆಸ್ ಪರ ಪ್ರಚಾರ ನಡೆಸಿ ಮಾತನಾಡಿ, ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಬಿಜೆಪಿ ಸರ್ಕಾರ ಸಹಕಾರ ನೀಡಲಿಲ್ಲ. ಇಂತಹ ದುರಾಡಳಿತವನ್ನು ಬಿಜೆಪಿ ನಡೆಸುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿರುವ ಬಿಜೆಪಿ ಸರ್ಕಾರದ ದುರಾಡಳಿತದ ಬಗ್ಗೆ ಬಿಜೆಪಿಯ ಹಿರಿಯ ಸದಸ್ಯ ಬಸವರಾಜ ಯತ್ನಾಳ್ ಅವರೇ ಅಸಮಾಧಾನ ವ್ಯಕ್ತಪಡಿಸಿರುವುದು ಬಿಜೆಪಿ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದರು.
ಈ ಹಿಂದೆ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ನೀಡಿದ ಅನ್ನಭಾಗ್ಯ ಬಿಟ್ಟರೆ ಇದುವರೆಗೂ ಬೇರೆ ಯಾವ ಪಕ್ಷಗಳು ಉಚಿತವಾಗಿ ಅಕ್ಕಿ ನೀಡಿವೆ. ಇದುವರೆಗೂ ಜನಸಾಮಾನ್ಯರಿಗೆ ಹೊಸ ಯೋಜನೆಯನ್ನು ಜಾರಿಗೊಳಿಸಿಲ್ಲ. ಹಾಗಾಗಿ ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಅವರಿಗೆ ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರು.
ಇನ್ನೂ ಪ್ರಚಾರಕ್ಕೆ ಬಾರದ ಜೆಡಿಎಸ್ ಅಭ್ಯರ್ಥಿ:
ಕೋವಿಡ್ ನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣವಾಗಿರುವ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರು ಸ್ವಗೃಹದಲ್ಲಿ ವಿಶ್ರಾಂತಿಯಲ್ಲಿದ್ದಾರೆ. ಅ.21ರಂದು ಬುಧವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡುವ ಹಿನ್ನೆಲೆಯಲ್ಲಿ ಅಭ್ಯರ್ಥಿಯೂ ಪ್ರಚಾರ ಕಾರ್ಯಕ್ಕೆ ಮುಂದಾಗಲಿದ್ದಾರೆ.
ರೈತರ ಬಳಿ ಜೆಡಿಎಸ್ ಮತ ಪ್ರಚಾರ
ಶಿರಾ ಉಪ ಚುನಾವಣೆಯಲ್ಲಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಹಾಗೂ ಆರ್.ಉಗ್ರೇಶ್ ಅವರು ಮಂಗಳವಾರ ನಡೆದ ಸಂತೆಯಲ್ಲಿ ರೈತರ ಬಳಿಗೆ ತೆರಳಿ ಮತಯಾಚನೆ ಮಾಡಿದರು.