ಬೆಂಗಳೂರು: ರಾಜ್ಯದಲ್ಲಿ ಕಳೆದ ಆರು ತಿಂಗಳಿನಿಂದ ಮಹಾಮಾರಿ ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಮತ್ತು ಲಾಕ್ಡೌನ್ ನಿಯಮಗಳನ್ನು ಜನರು ಕಟ್ಟುನಿಟ್ಟಾಗಿ ಪಾಲನೆ ಮಾಡಿಸುವಲ್ಲಿ ಪೊಲೀಸರು ಪಟ್ಟ ಶ್ರಮ ಶ್ಲಾಘನೀಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪೊಲೀಸ್ ಸಂಸ್ಮರಣ ದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿರುವ ಸಶಸ್ತ್ರ ಮೀಸಲು ಪಡೆಯ ಕೇಂದ್ರ ಸ್ಥಾನದ ಹುತಾತ್ಮರ ಉದ್ಯಾನದಲ್ಲಿ ಬುಧವಾರ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಭಾರತ-ಚೀನಾ ಗಡಿ ಲಡಾಕ್ನಲ್ಲಿ ಸೈನಿಕರನ್ನು ಹತ್ಯೆಗೈದಿದ್ದು, ದೇಶಾದ್ಯಂತ ಒಟ್ಟು 264 ಮಂದಿ ಕರ್ತವ್ಯದ ಸಂದರ್ಭದಲ್ಲಿ ಕೊನೆಯುಸಿರೆಳೆದಿದ್ದರು. ಕರ್ತವ್ಯ ನಿರ್ವಹಣಾ ಸಂದರ್ಭದಲ್ಲಿ ಮೃತಪಟ್ಟಪೊಲೀಸ್ ಸಿಬ್ಬಂದಿಗೆ ಗೌರವ ವಂದನೆ ಸೂಚಿಸುವುದು ಶಿಷ್ಟಾಚಾರವಾಗಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ನಗರದ ಸಶಸ್ತ್ರ ಮೀಸಲು ಪಡೆಯ ಮೈದಾನದಲ್ಲಿ ಹುತಾತ್ಮರ ಸ್ಮಾರಕಕ್ಕೆ ಮುಖ್ಯಮಂತ್ರಿಗಳು ಗೌರವ ಸೂಚಿಸಿದರು. ಇತ್ತೀಚೆಗೆ ಕೊರೋನಾ ಹೋರಾಟದಲ್ಲಿ ಹಾಗೂ ಇತರೆ ಕರ್ತವ್ಯ ನಿರ್ವಹಣೆ ವೇಳೆ ಮೃತಪಟ್ಟವರಿಗೆ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್,ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಉಪಸ್ಥಿತರಿದ್ದರು.