ಬಜೆಟ್‍ನಲ್ಲಿ ಘೋಷಿಸಿದ ಎಲ್ಲಾ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸರ್ಕಾರ ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ವಿಶೇಷ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರ ಹಂತ ಹಂತವಾಗಿ ಬಜೆಟ್‍ನಲ್ಲಿ ಘೋಷಿಸಿದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಿದೆ ಎಂದು ಹೇಳಿದರು. ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ ಈಗಾಗಲೇ 50 ಕೋಟಿ ರೂಪಾಯಿ ಅನುದಾನ ನೀಡಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ, ಮಂಗಳೂರಿಗೆ ಮಹಾತ್ಮ ಗಾಂಧಿ ನಗರ ವಿಕಾಸ್ ಯೋಜನೆಯಡಿ 125 ಕೋಟಿ ರೂಪಾಯಿ ಒದಗಿಸಲಾಗುವುದು. ಮೀನುಗಾರಿಕೆ ಅಭಿವೃದ್ಧಿ, ಕರಾವಳಿ ಆಂತರಿಕ ಭದ್ರತೆಗೆ ಆದ್ಯತೆ ಸೇರಿದಂತೆ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಸರಕಾರ ವಿಶೇಷ ಗಮನ ನೀಡಿದೆ ಎಂದರು. ಪ್ರವಾಸೋದ್ಯಮ ಕ್ಷೇತ್ರ ಮುಂದಿನ 6 ತಿಂಗಳಲ್ಲಿ ಹೊಸ ಬದಲಾವಣೆ ಕಾಣಲಿದೆ, ಈ ನಿಟ್ಟಿನಲ್ಲಿ ವಿಶೇಷ ಯೋಜನೆ ರೂಪಿಸಲಾಗಿದೆ. ಸಾಗರದ ಅಲೆಗಳಿಂದ ವಿದ್ಯುತ್ ಉತ್ಪಾದನೆಗೆ ಪೆÇ್ರೀತ್ಸಾಹ ನೀಡಲಾಗುವುದು ಎಂದು ಅವರು ಹೇಳಿದರು. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಾಸಕರಿಗೆ ತಲಾ 50 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ, ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ದೃಢ ಹೆಜ್ಜೆ ಇಡಲಾಗಿದೆ. ರಾಜ್ಯವನ್ನು ಡ್ರಗ್ಸ್ ಮುಕ್ತಗೊಳಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ