ಈ ಬಾರಿ ದೇಶದ ಜನತೆ ಸ್ಥಳೀಯ ಉತ್ಪನ್ನಗಳನ್ನು ಖರೀದಿಸುವ ಮೂಲಕ ದೀಪಾವಳಿ ಆಚರಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸ್ಥಳೀಯ ಉತ್ಪನ್ನಗಳ ಮೂಲಕ ದೀಪಾವಳಿ ಎಂಬ ಘೋಷವಾಕ್ಯದಡಿ ಜನತೆ ಸ್ಥಳೀಯ ಉತ್ಪನ್ನಗಳನ್ನು ಬಳಸಿ ಹಬ್ಬ ಆಚರಿಸಬೇಕೆಂದು ಹೇಳಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯಲ್ಲಿ 30 ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಿಲಾನ್ಯಾಸ ನೆರವೇರಿಸಿ, ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಮಾತನಾಡಿದ ಅವರು, ಪೂರ್ವಾಂಚಲ ಭಾಗದ ರೈತರು ಅತಿ ಹೆಚ್ಚು ಉತ್ಪನ್ನಗಳನ್ನು ಈ ಬಾರಿ ಬೆಳೆದಿದ್ದು, ಕೋವಿಡ್ -19 ಸಂಕಷ್ಟ ಸಂದರ್ಭದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ದೇಶದ ಆರೋಗ್ಯ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ಅದರಲ್ಲೂ ಪ್ರಮುಖವಾಗಿ ವಾರಾಣಸಿ ಆರೋಗ್ಯ ಸೌಲಭ್ಯಗಳ ಕೇಂದ್ರವಾಗಿ ಹೊರಹೊಮ್ಮಿದೆ. ಕೇವಲ ಪೂರ್ವಾಂಚಲ ಭಾಗವಷ್ಟೇ ಅಲ್ಲದೆ, ಇಡೀ ದೇಶಕ್ಕೆ ವಾರಾಣಸಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ ನಗರವಾಗಿದೆ ಎಂದು ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕಾಶಿನಗರದಲ್ಲಿ ಪ್ರಸ್ತುತ 8 ಸಾವಿರದ 900 ಕೋಟಿ ರೂಪಾಯಿ ಮೊತ್ತದ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಈವರೆಗೆ 18 ಸಾವಿರ ಕೋಟಿ ರೂಪಾಯಿ ಮೊತ್ತದ ಯೋಜನೆಗಳು ಮಂಜೂರಾಗಿವೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ