ಮದ್ದೂರು : ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗಿ ಸಹಭಾಗಿತ್ವಕ್ಕೆ ವಹಿಸುವುದಕ್ಕೆ ವಿರೋಧ ವ್ಯಕ್ತಪಡಿಸುವ ರಾಜಕಾರಣಿಗಳು, ಕೆಲವು ಸಂಘಟನೆಗಳು ರಾಜಕೀಯದಲ್ಲಿ ಸದ್ದು ಮಾಡಬೇಕು ಎಂಬ ಉದ್ದೇಶವೇ ಹೊರತು ಬೇರೆ ಏನು ಇಲ್ಲ ಇದರಿಂದ ರೈತರ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಎಂದು ಸಂಸದೆ ಸುಮಲತಾ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಷುಗರ್ ಸಕ್ಕರೆ ಕಾರ್ಖಾನೆ ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭ ಮಾಡುವುದರಿಂದ ರೈತರ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಒಂದಷ್ಟು ಉದ್ಯೋಗ ಅವಕಾಶಗಳು ದೊರಕುತ್ತವೆ. ಇಂತಹ ಸ್ಥಿತಿಯಲ್ಲಿ ಕಾರ್ಖಾನೆ ಪ್ರಾರಂಭಕ್ಕೆ ರಾಜಕಾರಣಿಗಳು ವಿರೋಧ ಮಾಡುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.
ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್„ಸಿದ್ದ ಸಂದರ್ಭದಲ್ಲಿ ಕಾವೇರಿ ನೀರಿನ ಸಮಸ್ಯೆ ಹಾಗೂ ಮೈಷುಗರ್ ಕಾರ್ಖಾನೆ ಪ್ರಾರಂಭದ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಿ ಪರಿಹಾರ ರೂಪಿಸುವುದಾಗಿ ಭರವಸೆ ನೀಡಿ. ಆನಂತರ ಚರ್ಚೆ ನಡೆಸಿ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಅಲ್ಲದೆ ಕೆಆರ್ಎಸ್ ಆಸುಪಾಸಿನಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ನಿಯಂತ್ರಣದ ಬಗ್ಗೆ ಸಹ ಚರ್ಚಿಸಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಸಂಸದೆ ಸುಮಲತಾ ತಿಳಿಸಿದರು.