ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕೆಎಸ್ಕ್ಯುಎಎಸಿ ವತಿಯಿಂದ ನಡೆಸಲಾಗುವ ಎನ್ಟಿಎಸ್ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಎನ್ಟಿಎಸ್ ವಿದ್ಯಾರ್ಥಿ ವೇತನ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲನೇ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ವರ್ಷದಲ್ಲಿ 10ನೇ ತರಗತಿಯಲ್ಲಿ ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳಿಗೆ ಜ.24ರಂದು ಈ ಪರೀಕ್ಷೆ ನಡೆಯಲಿದೆ ಎಂದರು.
ವಿದ್ಯಾರ್ಥಿವೇತನ ಪಡೆಯುವ ಹಿನ್ನೆಲೆಯಲ್ಲಿ ನಡೆಯುವ ಪರೀಕ್ಷೆಗೆ ಹೆಚ್ಚಿನ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ಸರ್ಕಾರಿ, ಅನುದಾನಿತ, ಅನುದಾನ ರಹಿತ, ಸ್ಥಳೀಯ ಸಂಸ್ಥೆಗಳ ಹಾಗೆಯೇ ದೂರಶಿಕ್ಷಣದಲ್ಲಿ ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಹೇಳಿದರು.
ಮೊದಲ ಹಂತದ ಪರೀಕ್ಷೆ ನಂತರ ದ್ವಿತೀಯ ಹಂತದ ಪರೀಕ್ಷೆ ನಡೆಯಲಿದೆ. ದ್ವಿತೀಯ ಹಂತದ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪಿಯುಸಿ ತರಗತಿಗಳ ಅಭ್ಯಾಸದ ಸಂದರ್ಭದಲ್ಲಿ ಮಾಸಿಕ 1200 ರೂ. ಮತ್ತು ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತದಲ್ಲಿ ಮಾಸಿಕ 2000 ರೂಪಾಯಿ ಹಾಗೂ ಉನ್ನತ ಶಿಕ್ಷಣದ ಹಂತದಲ್ಲಿ ಯುಜಿಸಿ ನಿಯಮಾನುಸಾರ ವಿದ್ಯಾರ್ಥಿವೇತನ ನೀಡಲಾಗುತ್ತದೆ ಎಂದು ತಿಳಿಸಿದರು.