ಶಾಲಾರಂಭ, ಕಲಿಕಾ ಪ್ರಕ್ರಿಯೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ : ಸಚಿವ ಎಸ್.ಸುರೇಶಕುಮಾರ್

ಬೆಂಗಳೂರು: ಶೀಘ್ರವೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆದು ಶಾಲಾರಂಭ ಹಾಗೂ ಕಲಿಕಾ ಪ್ರಕ್ರಿಯೆ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ತಿಳಿಸಿದರು.
ಬುಧವಾರ ವಿಧಾನಸೌಧದಲ್ಲಿ ಖಾಸಗಿ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಪ್ರತಿನಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳೊಂದಿಗೆ ಶಾಲಾರಂಭ ಹಾಗೂ ಮಕ್ಕಳ ಕಲಿಕಾ ಪ್ರಕ್ರಿಯೆ ಆರಂಭಿಸುವ ಕುರಿತು ಚರ್ಚಿಸಲಾಗುವುದು. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸುವ ಕುರಿತು ಆರೋಗ್ಯ ಇಲಾಖೆಯ ತಜ್ಞರ ಸಮಿತಿಯೊಂದಿಗೂ ಚರ್ಚಿಸಿ ಸೂಕ್ತ ನಿರ್ಧಾರ ಮಾಡಲಾಗುವುದು ಎಂದರು.
ಹಲವು ರೀತಿಯಲ್ಲಿ ಮಕ್ಕಳನ್ನು ಕಲಿಕಾ ಪ್ರಕ್ರಿಯೆಯಲ್ಲಿ ತೊಡಗಿಸಲಾಗಿದೆಯಾದರೂ ಅದು ಪರಿಣಾಮಕಾರಿಯಾಗಿಲ್ಲ. ಮಕ್ಕಳು ಬಹುಕಾಲ ಶಾಲೆಯಿಂದ ಹೊರಗುಳಿಯುವುದರಿಂದ ಸಮಾಜದ ಮೇಲೆ ಆಗಿರುವ ಪರಿಣಾಮಗಳು ಸರ್ಕಾರದ ಗಮನಕ್ಕೆ ಬಂದಿದೆ. ಬಹುಕಾಲ ಮಕ್ಕಳನ್ನು ಶಾಲೆಯಿಂದ ಹೊರಗಿಡುವುದು ಸರಿಯಲ್ಲವಾದ್ದರಿಂದ ಸರ್ಕಾರ ಸೂಕ್ತ ಚರ್ಚೆಯ ನಂತರ ನಿರ್ಣಯಕ್ಕೆ ಬರಲಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭವಿಷ್ಯದ ಕುರಿತು ಸರ್ಕಾರ ಯಾವುದೇ ರೀತಿಯಲ್ಲೂ, ಯಾವುದೇ ಸಂದರ್ಭದಲ್ಲೂ ರಾಜಿಗೆ ಮುಂದಾಗುವುದಿಲ್ಲ. ಶಾಲಾ-ಕಾಲೇಜುಗಳು ಆರಂಭವಾಗದೇ ಇರುವುದರಿಂಪೊಷಕರದ  ಕಳವಳ, ಮುಂದಿನ ವ್ಯಾಸಂಗಕ್ಕಾಗಿ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಬೇಕಾದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಭವಿಷ್ಯ ಕುರಿತ ವಿಚಾರಗಳು ಸರ್ಕಾರದ ಗಮನದಲ್ಲಿವೆ. ಈ ಎಲ್ಲ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವ ನಾರಾಯಣ್ ಮಾತನಾಡಿ, ಕೋವಿಡ್ ಹಿನ್ನೆಲೆ ಯಾವುದೇ ರಾಜ್ಯದಲ್ಲೂ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಉನ್ನತ ಶಿಕ್ಷಣ ಹಾಗೂ ವಿಶ್ವವಿದ್ಯಾನಿಲಯಗಳ ತರಗತಿಗಳನ್ನು ಆರಂಭಿಸಲಾಗಿದೆ. ಶಾಲಾ ಶಿಕ್ಷಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳೊಂದಿಗೆ ಶಾಲೆಗಳನ್ನು ಆರಂಭಿಸಲು ಶೀಘ್ರದಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಮಂಗಳೂರಿನ ಶಾರದಾ ವಿದ್ಯಾಸಂಸ್ಥೆ ಅಧ್ಯಕ್ಷ ಪೊ. ಎಂ. ಬಿ. ಪುರಾಣಿಕ್, ಎಕ್ಸ್‍ಪರ್ಟ್ ವಿದ್ಯಾಸಂಸ್ಥೆ ಅಧ್ಯಕ್ಷ ಪೊ. ನರೇಂದ್ರ ನಾಯಕ್, ಶಕ್ತಿ ಶಿಕ್ಷಣ ಸಂಸ್ಥೆ ಆಡಳಿತಾಕಾರಿ ಕೆ.ಸಿ. ನಾಯಕ್, ದಾವಣಗೆರೆ ವಿಶ್ವೇಶ್ವರಯ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶ್ರೀಧರ, ಕಲ್ಲಡ್ಕ ಶ್ರೀರಾಮ ವಿದ್ಯಾಮಂದಿರದ ಸಂಚಾಲಕ ವಸಂತ ಮಾಧವ, ಹೆಬ್ರಿ ಎಸ್.ಆರ್. ಪಿಯು ಕಾಲೇಜು ಸಂಸ್ಥೆಯ ಅಧ್ಯಕ್ಷ ನಾಗರಾಜ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ