ಹೊಸದಿಲ್ಲಿ : ಆರು ವಾರಗಳೊಳಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)198 ವಾರ್ಡ್ಗಳಿಗೆ ಚುನಾವಣೆ ಘೋಷಿಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಶುಕ್ರವಾರ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಪ್ರಕರಣಕ್ಕೆ ಸಂಬಂಸಿದಂತೆ ರಾಜ್ಯ ಚುನಾವಣಾ ಆಯೋಗ ಮತ್ತು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಎಂ. ಶಿವರಾಜು, ಅಬ್ದುಲ್ ವಾಜಿದ್ ಮತ್ತು ರವಿ ಜಗನ್ ಅವರಿಗೂ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ನೇತೃತ್ವದ ಪೀಠವು ನೋಟಿಸ್ ಜಾರಿ ಮಾಡಿದೆ.
ಬೆಂಗಳೂರು ನಗರದ ವಾರ್ಡ್ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಏರಿಸಲು ಅನುವು ಮಾಡಿಕೊಡುವ 2020ರ ಕರ್ನಾಟಕ ಮುನ್ಸಿಪಲ್ ಕಾರ್ಪೊರೆಸನ್ ಮೂರನೇ ತಿದ್ದುಪಡಿ ಕಾಯ್ದೆಯ ಸಿಂಧುತ್ವವನ್ನು ಡಿಸೆಂಬರ್ 4ರಂದು ಹೈಕೋರ್ಟ್ ಎತ್ತಿ ಹಿಡಿದಿತ್ತು.