ಜ.15ರಿಂದ ವೃತ್ತಿಪರ ಕೋರ್ಸ್ ಆಫ್‍ಲೈನ್ ತರಗತಿ

ಬೆಂಗಳೂರು: ರಾಜ್ಯಾದ್ಯಂತ ಜ.15ರಿಂದ ಪದವಿ, ಸ್ನಾತಕೋತ್ತರ, ವೃತ್ತಿಪರ ಕೋರ್ಸ್‍ಗಳ ಎಲ್ಲಾ ವಿದ್ಯಾರ್ಥಿಗಳಿಗೆ ಆಫ್‍ಲೈನ್ ತರಗತಿಗಳು ಆರಂಭವಾಗಲಿವೆ.
ಈಗಾಗಲೇ ಅಂತಿಮ ಪದವಿ ತರಗತಿಗಳು ಸುಸೂತ್ರವಾಗಿ ನಡೆಯುತ್ತಿದೆ. ಉಳಿದ ಕೋರ್ಸ್‍ಗಳ ವಿದ್ಯಾರ್ಥಿಗಳೂ ತರಗತಿ ಆರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಸೋಮವಾರ ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಉನ್ನತ ಮಟ್ಟದ ಅಕಾರಿಗಳೊಂದಿಗೆ ಸಭೆ ನಡೆದು ಜ.15ರಿಂದ ಬಾಕಿ ತರಗತಿಗಳನ್ನು ಪುನಾರಂಭಿಸುವ ತೀರ್ಮಾನ ಕೈಗೊಳ್ಳಲಾಯಿತು.
ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಥಮ, ದ್ವಿತೀಯ ಹಾಗೂ ಮೂರನೇ ವರ್ಷದ ತರಗತಿಗಳು ಕೂಡ ಆರಂಭವಾಗಲಿದ್ದು, ತರಗತಿಗಳು ಆರಂಭವಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್‍ಗಳನ್ನು ತೆರೆಯಲಾಗುತ್ತಿದೆ. ಬಸ್‍ಪಾಸ್ ವಿತರಣೆಗೆ ಸಾರಿಗೆ ಇಲಾಖೆಯ ಅಕಾರಿಗಳಿಗೆ ಮನವಿ ಮಾಡಿದ್ದು, ಶೀಘ್ರದಲ್ಲೇ ಬಸ್‍ಪಾಸ್ ವಿತರಿಸಲು ಸೂಚಿಸಲಾಗಿದೆ.
ಕೋವಿಡ್ ನಿಯಮ ಪಾಲನೆ ಕಡ್ಡಾಯ:
ಕೋವಿಡ್ ಮಾರ್ಗಸೂಚಿಯಂತೆ ಎಲ್ಲ ಶಿಕ್ಷಣ ಸಂಸ್ಥೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಕಾಲೇಜುಗಳಲ್ಲಿ ಕೋವಿಡ್ ತಪಾಸಣೆ, ಸ್ಯಾನಿಟೈಸ್ ವ್ಯವಸ್ಥೆ, ದೈಹಿಕ ಅಂತರ ಪಾಲನೆ ಸೇರಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನೂ ಕಡ್ಡಾಯವಾಗಿ ಪಾಲಿಸಬೇಕು.
ಪೂರ್ಣ ಪ್ರಮಾಣದಲ್ಲಿ ಹಾಸ್ಟೆ ಲ್‍ಗಳನ್ನು ತೆರೆಯಲು ಒಪ್ಪಿಗೆ ದೊರೆತಿದೆ. ಇದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿ ಸಿದ್ಧಪಡಿಸುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳನ್ನು ಕೋರಲಾಗಿದೆ. ಕಾಲೇಜುಗಳಲ್ಲಿ ಗ್ರಂಥಾಲಯ, ಕ್ಯಾಂಟೀನ್, ಶೈಕ್ಷಣಿಕ ಮತ್ತು ಸಾಂಸ್ಕøತಿಕ ಚಟುವಟಿಕೆ, ಕ್ರೀಡಾಕೂಟ ಆಯೋಜನೆಗೂ ಎಸ್‍ಒಪಿಯನ್ನು ಸಿದ್ಧಪಡಿಸಲಾಗಿದೆ.
ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯಕ್, ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೆದ್ ಅಖ್ತರ್, ಹಿಂದುಳಿದ ವರ್ಗಗಳ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರವಿಕುಮಾರ ಸುರಪುರ್ ಮತ್ತಿತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ