ರಾಜ್ಯದ 237 ಕೇಂದ್ರಗಳಲ್ಲಿ ಕೋವಿಶೀಲ್ಡ್ , 6 ಕಡೆ ಕೋವ್ಯಾಕ್ಸಿನ್ ವಿತರಣೆ ಇಂದು ಲಸಿಕಾಭಿಯಾನ

ಬೆಂಗಳೂರು: ರಾಜ್ಯದ 243 ಕೇಂದ್ರಗಳಲ್ಲಿ ಜ.16ರ ಶನಿವಾರದಿಂದ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆ ವಿತರಣೆ ಕಾರ್ಯಕ್ಕೆ ತಯಾರಿ ನಡೆದಿದ್ದು, ಒಂದು ವಾರದೊಳಗೆ ಮೊದಲ ಹಂತದ ಲಸಿಕೆ ವಿತರಣಾ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆಗಳಿವೆ.
ಸೇಂಟ್ ಜಾನ್ ವೈದ್ಯಕೀಯ ಕಾಲೇಜು ಸೇರಿ ರಾಜಧಾನಿಯ 10 ಕೇಂದ್ರಗಳಲ್ಲಿ ಲಸಿಕೆ ವಿತರಣೆಯಾಗಲಿದೆ. ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆನ್‍ಲೈನ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ನಾಡಿನ 237 ಕೇಂದ್ರಗಳಲ್ಲಿ ಕೋವಿಶೀಲ್ಡ್ ಲಸಿಕೆ ವಿತರಿಸಲಾಗುತ್ತದೆ. ಇನ್ನು ಬಳ್ಳಾರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ ಕೇಂದ್ರಗಳಲ್ಲಿ ಕೋವ್ಯಾಕ್ಸಿನ್ ಲಸಿಕೆ ವಿತರಣೆಯಾಗಲಿದ್ದು, ಈಗಾಗಲೇ ಸೂಕ್ತ ವ್ಯವಸ್ಥೆ ಮಾಡಿಕೊಂಡಿರುವುದಾಗಿ ಜಿಲ್ಲಾಕಾರಿಗಳು, ಜಿಲ್ಲಾಪಂಚಾಯಿತಿ ಸಿಇಒ, ಜಿಲ್ಲಾ ಆರೋಗ್ಯಾಕಾರಿಗಳು ರಾಜ್ಯ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಭರವಸೆ ನೀಡಿದರು.
ಶುಕ್ರವಾರ ಅಕಾರಿಗಳೊಂದಿಗೆ ಸಭೆ ನಡೆಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಲಸಿಕೆ ನೀಡಲು ಮೊದಲಿಗೆ ಜನಪ್ರತಿನಿಗಳನ್ನೇ ಆರಿಸಬಹುದಿತ್ತು. ಆದರೆ, ಕೊರೋನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವವರಿಗೆ ಮೊದಲ ಪ್ರಾಶಸ್ತ್ಯ ವಾಗಿ ಲಸಿಕೆ ನೀಡಲಾಗುತ್ತಿದೆ. ಬಳಿಕ ಇತರೆ ರೋಗಗಳಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಸಮರ್ಥಿಸಿಕೊಂಡರು.
ಒಟ್ಟು 7,17,439 ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತದೆ. ಮೊದಲ ದಿನ 24,300 ಮಂದಿಗೆ ನೀಡುವ ಗುರಿ ಇದೆ. ನಮ್ಮಲ್ಲಿ ಒಟ್ಟು 8,14,500 ಡೋಸ್ ಲಸಿಕೆ ಲಭ್ಯವಿದ್ದು, ಒಂದು ವಾರದೊಳಗೆ ಮೊದಲ ಹಂತದ ವಿತರಣೆ ಪ್ರಕ್ರಿಯೆ ಮುಗಿಯುವ ಸಾಧ್ಯತೆ ಇದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ