ಬೆಂಗಳೂರು, ಜು.15- ಕಳೆದ ಮೂರು ದಿನಗಳಿಂದ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು , ಇಂದೂ ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕಡೆ ಮಳೆಯ ಆರ್ಭಟ ಮುಂದುವರೆದಿದ್ದು , ಜನಜೀವನ ಅಸ್ತವ್ಯಸ್ತವಾಗಿತ್ತು.
ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಆಗಾಗ್ಗೆ ಹಗುರ ಮಳೆಯಾಗುತ್ತಿದೆ. ಕೆಲವೆಡೆ ಸಾಧಾರಣ ಮಳೆಯಾಗುತ್ತಿದ್ದು, ಹಲವೆಡೆ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲೂ ಹೆಚ್ಚಿನ ಪ್ರಮಾಣದ ಮಳೆಯಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲೂ ಕೆಲವೆಡೆ ಭಾರೀ ಮಳೆಯಾಗಿದೆ.
ಉಳಿದಂತೆ ರಾಜ್ಯದ ಒಳ ನಾಡಿನಲ್ಲಿ ಹಗುರದಿಂದ ಸಾಧಾರಣ ಪ್ರಮಾಣದ ಮಳೆಯಾಗಿದೆ. ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚಿನ ಪ್ರಮಾಣದ ಮಳೆ ಮುಂದುವರೆಯಲಿದೆ.
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಆ ಭಾಗದ ನದಿಗಳು ತುಂಬಿ ಹರಿಯುತ್ತಿವೆ.
ಅರಬ್ಬೀ ಸಮುದ್ರದ ಅಲೆಗಳು ಪ್ರಕ್ಷುಬ್ಧಗೊಂಡಿದ್ದು, ಮೀನುಗಾರರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಕಾಳಿ ನದಿಗೆ ನೀರಿನ ಒಳ ಹರಿವು ಹೆಚ್ಚಾಗಿದ್ದು , ಮೂರು ಗೇಟ್ಗಳ ಮೂಲಕ ನೀರನ್ನು ಹೊರ ಬಿಡಲಾಗಿದೆ.
ಬಾಗಲಕೋಟೆ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ , ಕೊಪ್ಪಳ ಮುಂತಾದೆಡೆ ಜೋರು ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಹಾವೇರಿ, ಗದಗ, ಬಾಗಲಕೋಟೆ, ಕಲ್ಬುರ್ಗಿ ಜಿಲ್ಲೆಗಳಲ್ಲಿ 18ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೊಡಗಿನ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, 12,282 ಕ್ಯೂಸೆಕ್ಸ್ ಏರಿಕೆಯಾಗಿದ್ದು , ಜಲಾಶಯ ಭರ್ತಿಯಾಗಲು 7 ಅಡಿ ಬಾಕಿ ಇದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು , ಲಿಂಗನಮಕ್ಕಿ ಜಲಾಶಯಕ್ಕೆ 33.331 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು , ಜಲಾಶಯದ ನೀರಿನ ಮಟ್ಟ 1786.05 ಅಡಿಗಳಿಗೆ ತಲುಪಿದೆ.
ಭದ್ರಾ ಜಲಾಶಯಕ್ಕೆ 7,644 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಜಲಾಶಯದ ನೀರಿನ ಮಟ್ಟ 157.45 ಅಡಿಗಳಿಗೆ ಹೆಚ್ಚಳವಾಗಿದೆ.
ತುಂಗಾ ಜಲಾಶಯಕ್ಕೆ 11.456 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ಮಳೆಯ ಅಬ್ಬರಕ್ಕೆ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ.
ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದೆ. ಬಲಮುರಿ, ಕಿರು ಸೇತುವೆ ಮೇಲೆ ನೀರು ಹರಿಯುತ್ತಿದ್ದು , ಸಂಚಾರ ಬಂದ್ ಆಗಿದೆ.
ಮಡಿಕೇರಿ, ಮಂಗಳೂರು, ರಸ್ತೆಯಲ್ಲಿ ಸಣ್ಣ ಪ್ರಮಾಣದ ಭೂ ಕುಸಿತವಾಗಿದ್ದು , ಮುನ್ನೆಚ್ಚರಿಕೆ ಕ್ರಮವಾಗಿ 6 ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ.