ಬೆಂಗಳೂರು, ಜು.20- ಜೆಡಿಎಸ್ ಪಕ್ಷ ತೊರೆದು ಹೋದವರ ಅವಶ್ಯಕತೆ ನಮಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಜಿಲ್ಲಾವಾರು ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಿಟ್ಟು ಹೋದವರನ್ನು ಕರೆತರುವ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಹೊಸ ಯುವಕರ ಪಡೆಯೊಂದಿಗೆ ಪಕ್ಷವನ್ನು ಸಂಘಟನೆ ಮಾಡುವ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಅಗತ್ಯವಿದ್ದರೆ ಕಾಂಗ್ರೆಸ್ನವರು ಕರೆದುಕೊಳ್ಳಲಿ ನಮ್ಮದೇನು ಅಭ್ಯಂತರವಿಲ್ಲ ಎಂದರು.
ಪ್ರಾದೇಶಿಕ ನೆಲೆಗಟ್ಟಿನಲ್ಲಿ ಜನರ ವಿಶ್ವಾಸಗಳಿಸಿ ಮುಂದಿನ ಚುನಾವಣೆ ಎದುರಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದೇವೆ ಎಂದು ಅವರು ಹೇಳಿದರು.
ರಾಜ್ಯಪಾಲರಿಗೆ ಮನವಿ:
ಮೇಕೆದಾಟು, ಮಹದಾಯಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಸಂಬಂಧಿಸಿದ ಮನವಿ ಪತ್ರವನ್ನು ರಾಜ್ಯಪಾಲರ ಮೂಲಕ ರಾಷ್ಟ್ರಪತಿ ಹಾಗೂ ಪ್ರಧಾನಿಯವರಿಗೆ ಸಲ್ಲಿಸಲಾಗುವುದು. ಜೆಡಿಎಸ್ ಶಾಸಕರ ನಿಯೋಗ ನಾಲ್ಕೈದು ದಿನಗಳಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಈ ಹಿಂದೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ ಯೋಜನೆಗಳಿಗೆ ಅಡ್ಡಿಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮನವಿ ಪತ್ರ ಸಲ್ಲಿಸಲಾಗುವುದು.
ಪ್ರತಿ ಸಂದರ್ಭದಲ್ಲೂ ನೀರಾವರಿ ಹಾಗೂ ಯೋಜನೆಗಳ ವಿಚಾರದಲ್ಲಿ ಆಗಿರುವ ಅನ್ಯಾಯಗಳನ್ನು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗುವುದು. ಕೇಂದ್ರ ಸರ್ಕಾರದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರದಲ್ಲಿದ್ದರೆ ರಾಜ್ಯಕ್ಕೆ ಮಾರಕ ಎಂಬುದು ಹಲವು ನಿದರ್ಶನಗಳ ಮೂಲಕ ಸಾಬೀತಾಗಿದೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ದ್ವಂದ್ವ ನಿಲುವು:
ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ವಿಚಾರ ಪ್ರಸ್ತಾಪವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ನ ಒಂದು ಗುಂಪು ಯಡಿಯೂರಪ್ಪ ಅವರ ಬಗ್ಗೆ ಅನುಕಂಪ ವ್ಯಕ್ತಪಡಿಸಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಮುಂದಿನ ಮುಖ್ಯಮಂತ್ರಿ ಆಕಾಂಕ್ಷಿಯೊಬ್ಬರು ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರವಾಗಿದ್ದು, ಮೊದಲು ತೊಲಗಬೇಕು ಎಂದು ಹೇಳುತ್ತಾರೆ. ಈ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವನ್ನು ಅನುಸರಿಸುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು.
ಮಾಜಿ ಸಚಿವರಾದ ಎಂ.ಬಿ.ಪಾಟೀಲ, ಶ್ಯಾಮನೂರು ಶಿವಶಂಕರಪ್ಪ ಅವರು ಮುಖ್ಯಮಂತ್ರಿಯ ಬಗ್ಗೆ ಅನುಕುಂಪ ವ್ಯಕ್ತಪಡಿಸಿದ್ದಾರೆ. ಒಂದು ಸಮಾಜದ ಓಲೈಕೆಗೆ ಮುಂದಾಗಿದ್ದಾರೆ. ಮತ್ತೊಂದು ಗುಂಪು ಈ ಸರ್ಕಾರ ತೊಲಗಬೇಕು ಎಂದು ಹೇಳುತ್ತಿದೆ. ಕಾಂಗ್ರೆಸ್ಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ಅವರು ಮರುಕ ವ್ಯಕ್ತಪಡಿಸಿದರು.
ಬಿಜೆಪಿ ರಾಷ್ಟ್ರೀಯ ರಾಜ್ಯ ನಾಯಕರು ತಮ್ಮ ಆಂತರಿಕ ಬಿಕ್ಕಟ್ಟನ್ನು ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳಬೇಕು. ಮೈತ್ರಿ ಸರ್ಕಾರ ಪತನವಾದ ದಿನವೇ ರಾಜ್ಯಕ್ಕೆ ಒಳ್ಳೆಯ ಆಡಳಿತ ಕೊಡಿ ಎಂದು ಹೇಳಿದ್ದೆ. ಕಷ್ಟಪಟ್ಟು ಬಂದಿರುವ ಸರ್ಕಾರವಿದು. ಈ ಸರ್ಕಾರದ ತಪ್ಪುಗಳ ಬಗ್ಗೆ ಚರ್ಚೆ ಮಾಡಿಲ್ಲ. ಜನರ ತೀರ್ಮಾನಕ್ಕೆ ಬಿಟ್ಟಿರುವುದಾಗಿ ಹೇಳಿದರು.