ಬೆಂಗಳೂರು,ಜು.24- ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆ ನಾಳೆ ಬೆಳಗಾವಿ ಸೇರಿದಂತೆ ಕೆಲ ಜಿಲ್ಲೆಗಳಿಗೆ ಭೇಟಿ ನೀಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ.
ಇಂದು ಬೆಳಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕರೆ ಮಾಡಿದ್ದ ಸಿಎಂ ಬಿಎಸ್ವೈ, ಪರಿಸ್ಥಿತಿಯ ಮಾಹಿತಿ ಪಡೆದಿದ್ದಾರೆ. ಉಸ್ತುವಾರಿ ಸಚಿವರಿಗೆ ಜಿಲ್ಲೆಯಲ್ಲೇ ಇರುವಂತೆ ಸೂಚನೆ ನೀಡಿದ್ದಾರೆ.
ನಾಳೆ ಮುಖ್ಯಮಂತ್ರಿ ಯಡಿಯೂರಪ್ಪನವರೇ ಖುದ್ದು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ.
ಇದಕ್ಕೂ ಮುನ್ನ ಬೆಳಗಾವಿ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದು, ತಕ್ಷಣವೇ ಸಮಾರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಅಲ್ಲದೆ ಸರ್ಕಾರ ಪರಿಹಾರ ಕಾರ್ಯಕ್ಕೆ ಎಲ್ಲ ರೀತಿಯ ನೆರವು ನೀಡಲಿದ್ದು, ಕಾಳಜಿ ಕೇಂದ್ರ ತೆರೆದು ಜನಜಾನುವಾರುಗಳ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿ ಪರಿಸ್ಥಿತಿ ಅವಲೋಕಿಸಿ ಪರಿಹಾರ ಕಾರ್ಯ ಕೈಗೊಳ್ಳಬೇಕೆಂದು ತಾಕೀತು ಮಾಡಿದರು.
ಪ್ರವಾಹ ಇಳಿಮುಖವಾಗುವವರೆಗೂ ಜಿಲ್ಲೆಯಲ್ಲೇ ಇರಬೇಕು. ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪೆÇಲೀಸ್ ಸೇರಿದಂತೆ ಮತ್ತಿತರ ಜೊತೆ ಸಂತ್ರಸ್ತರಾದವರನ್ನು ರಕ್ಷಣೆ ಮಾಡಬೇಕೆಂದು ಹೇಳಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಯಾರೊಬ್ಬರೂ ಜಾಗ ಬಿಟ್ಟು ಕದಲಬಾರದು. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ವಸತಿ ಶಾಲೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕೆಂದು ಸಿಎಂ ಸಲಹೆ ಮಾಡಿದ್ದಾರೆ.