ಸಂಸತ್‍ನಲ್ಲಿ ವಿಪಕ್ಷಗಳ ಪ್ರತಿಭಟನೆ, ಗದ್ದಲ: ಲೋಕಸಭೆಯಲ್ಲಿ ಕಾಗದ ತೂರಿದ ಕೈ

ಹೊಸದಿಲ್ಲಿ: ಪೆಗಾಸಸ್ ಬೇಹು ಪ್ರಕರಣ, ಕೃಷಿ ಕಾಯ್ದೆಗಳು, ಬೆಲೆ ಏರಿಕೆ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿ ಸಂಸತ್‍ನ ಉಭಯ ಸದನಗಳಲ್ಲಿ ವಿಪಕ್ಷಗಳು ಗದ್ದಲ ನಡೆಸಿ, ಸುಗಮ ಕಲಾಪಕ್ಕೆ ಅಡ್ಡಿಪಡಿಸಿದವು. ಕಾಂಗ್ರೆಸ್ ಸದಸ್ಯರ ಪ್ರತಿಭಟನೆಯಿಂದ ಲೋಕಸಭೆಯಲ್ಲಿ ಗದ್ದಲ ಉಂಟಾಗಿ ಕಲಾಪವನ್ನು ಮುಂದೂಡಲಾಯಿತು.

ಕಾಂಗ್ರೆಸ್ ಸದಸ್ಯರು ಸಭಾಪತಿ ಪೀಠದತ್ತ ಕಾಗದಗಳನ್ನು ತೂರಿ ಪ್ರತಿಭಟನೆ ನಡೆಸಿದರು. ಬೆಳಗ್ಗೆ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ವಿಪಕ್ಷ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆ ತೀವ್ರಗೊಂಡಾಗ ಕಾಂಗ್ರೆಸ್ ಸದಸ್ಯರು ಕಾಗದ ಪತ್ರಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನಡೆದಾಗ ಕಲಾಪವನ್ನು ಮುನ್ನಡೆಸುತ್ತಿದ್ದ ರಾಜೇಂದ್ರ ಅಗರ್ವಾಲ್ ನಿಯಮ 377 ಅಡಿಯಲ್ಲಿ ವಿಷಯವನ್ನು ಕೈಗೆತ್ತಿಕೊಂಡಿದ್ದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಹಲವು ಬಾರಿ ಕಲಾಪ ಮುಂದೂಡಿದರೂ ಪ್ರಯೋಜನವಾಗದ ಕಾರಣ ಲೋಕಸಭೆ ಕಲಾಪ ದಿನದ ಮಟ್ಟಿಗೆ ಮುಂದೂಡಲಾಯಿತು.

ರಾಜ್ಯಸಭೆಯಲ್ಲೂ ಇದೇ ಪರಿಸ್ಥಿತಿ
ಇತ್ತ ಸಂಸತ್‍ನ ಮೇಲ್ಮನೆಯಲ್ಲೂ ಇದೇ ಪರಿಸ್ಥಿತಿ ಇತ್ತು. ಪೆಗಾಸಸ್ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್, ಟಿಎಂಸಿ ಸೇರಿ ವಿಪಕ್ಷ ಸದಸ್ಯರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಅವರು ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಎಷ್ಟೇ ಮನವಿ ಮಾಡಿದರೂ ಕಿವಿಗೊಡದ ವಿಪಕ್ಷ ಸದಸ್ಯರು ಗದ್ದಲ ಮುಂದುವರಿಸಿದ ಕಾರಣ ಅಂತಿಮವಾಗಿ ಕಲಾಪವನ್ನು ಗುರುವಾರಕ್ಕೆ ಮುಂದೂಡಿಕೆ ಮಾಡಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ