ಮೇಕೆದಾಟು ಕಾಮಗಾರಿಯನ್ನು ಶೀಘ್ರ ಆರಂಭಿಸಿ, ಒಂದು ವರ್ಷದೊಳಗೆ ಪೂರ್ಣಗೊಳಿ: ಆಮ್ ಆದ್ಮಿ ಪಾರ್ಟಿಯ ನೂರಾರು ಕಾರ್ಯಕರ್ತರ ಉಪವಾಸ ಸತ್ಯಾಗ್ರಹ

ಬೆಂಗಳೂರು, ಆ.5- ಮೇಕೆದಾಟು ಕಾಮಗಾರಿಯನ್ನು ಶೀಘ್ರ ಆರಂಭಿಸಿ, ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯ ನೂರಾರು ಕಾರ್ಯಕರ್ತರು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು.

ನಗರದ ಆನಂದ್ ವೃತ್ತz ಸಮೀಪದ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಉಪವಾಸ ಸತ್ಯಾಗ್ರಹಕ್ಕೆ ಚಾಲನೆ ನೀಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮಾತನಾಡಿ, ಬೆಂಗಳೂರು ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. 13 ವರ್ಷಗಳ ಹಿಂದೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇವಲ 100 ವಾರ್ಡ್‍ಗಳಿದ್ದವು.

2007ರಲ್ಲಿ 110 ಹಳ್ಳಿಗಳು ಸೇರಿ ವಾರ್ಡ್‍ಗಳ ಸಂಖ್ಯೆ 198 ತಲುಪಿತು. ಈಗ 45 ವಾರ್ಡ್‍ಗಳನ್ನು ಸೇರಿಸಿ 243 ವಾರ್ಡ್ ಮಾಡಲು ಸಿದ್ಧತೆ ನಡೆಯುತ್ತಿದೆ.

2007ರಲ್ಲಿ ಸೇರಿದ 110 ವಾರ್ಡ್‍ಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಅಲ್ಲಿನ ಪೈಪುಗಳಲ್ಲಿ ನೀರಿನ ಬದಲು ಕೇವಲ ಗಾಳಿ ಬರುತ್ತಿದೆ. ಮೇಕೆದಾಟು ಅಣೆಕಟ್ಟು ನಿರ್ಮಾಣವಾಗದೇ 243 ವಾರ್ಡ್‍ಗಳಿಗೆ ಕುಡಿಯುವ ನೀರು ಪೂರೈಕೆ ಅಸಾಧ್ಯ ಎಂದು ಹೇಳಿದರು.

ನಗರದ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಸುವರ್ಣಯುಗ ಆರಂಭವಾಗುತ್ತದೆ ಎಂದು ಹೇಳಿಕೊಂಡು ಬಿಜೆಪಿಯು ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಪಡೆದಿದೆ. ಆದರೆ ಈ ಡಬಲ್ ಎಂಜಿನ್ ಸರ್ಕಾರಕ್ಕೆ ರಾಜ್ಯದ ಪರವಾಗಿ ದನಿ ಎತ್ತುವ ಶಕ್ತಿ ಇಲ್ಲ. ಮೇಕೆದಾಟು ವಿಚಾರದಲ್ಲಿ ಕೇಂದ್ರ ಸರ್ಕಾರವು ತಮಿಳುನಾಡಿನ ಪರವಾಗಿದೆ ಎಂದು ತಮಿಳುನಾಡಿನ ಬಿಜೆಪಿ ಮುಖಂಡರು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.

ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್, ಮುಖಂಡರಾದ ಲಕ್ಷ್ಮೀಕಾಂತ್ ರಾವ್, ರಾಜಶೇಖರ್ ದೊಡ್ಡಣ್ಣ, ಡಾ. ಸತೀಶ್, ಜೋತೀಶ್ ಕುಮಾರ್, ಪ್ರಕಾಶ್ ನಾಗರಾಜï, ಉಷಾ ಮೋಹನ್, ಸುಹಾಸಿನಿ ಫಣಿರಾಜ್, ಹಾಗೂ ನೂರಾರು ಕಾರ್ಯಕರ್ತರು ಉಪವಾಸ ಸತ್ಯಾಗ್ರಹದಲ್ಲಿ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ