ಬೆಂಗಳೂರು, ಆ.9- ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಆರಂಭಿಸಿದ ಕ್ವಿಟ್ ಇಂಡಿಯಾ ಮಾದರಿಯಲ್ಲಿಯೇ ನಾವು ಕ್ವಿಟ್ ಕೊರೊನಾ ಆಂದೋಲನಕ್ಕೆ ಚಾಲನೆ ನೀಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.
ಭಾರತ ಬಿಟ್ಟು ತೊಲಗಿ ದಿನದ ಅಂಗವಾಗಿ ನಗರದಲ್ಲಿಂದು ಎಂಜಿ ರಸ್ತೆಯ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಭಾರತವನ್ನು ಬ್ರಿಟಿಷರ ಆಳ್ವಿಕೆಯಿಂದ ಮುಕ್ತಗೊಳಿಸಲು 1942ರ ಆಗಷ್ಟ್ನಲ್ಲಿಯೇ ಮಹಾತ್ಮ ಗಾಂಧೀಜಿ ಅವರು ಕ್ವಿಟ್ ಇಂಡಿಯಾ ಚಳುವಳಿ ಆರಂಭಿಸಿದರು. ಆದರೆ, ಇದೀಗ ನಾವು ಕೋವಿಡ್ ಸಮಸ್ಯೆಯನ್ನು ಎದುರಿಸುತ್ತಿದ್ದು, ಇದನ್ನು ಓಡಿಸಲು ನಾವು ಸಹ ಆಂದೋಲನ ಕೈಗೊಳ್ಳಬೇಕಾಗಿದೆ.ಇದಕ್ಕೆ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ಹೇಳಿದರು.
ಕೊರೋನಾ ಸೋಂಕಿನ ಪ್ರಮಾಣ ತಗ್ಗಿಸಲು ನಾವೆಲ್ಲರೂ ಸರ್ಕಾರ ಜಾರಿಗೆ ತಂದಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗಿದೆ ಎಂದ ಅವರು, ಇನ್ನಷ್ಟು ದಿನಗಳ ಕಾಲ ನಗರದೆಲ್ಲೆಡೆ ರಾತ್ರಿ ವೇಳೆ ಮೋಜು ಮಸ್ತಿಯ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗುವುದು ಎಂದರು.
ಇನ್ನು, ಪ್ರಸ್ತುತ ಸಾಲಿನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧ್ವಜರೋಹಣ ಮಾಡಲಿದ್ದಾರೆ.ಆದರೆ, ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಈ ಬಾರಿಯೂ ಅನುವು ಮಾಡಿಕೊಟ್ಟಿಲ್ಲ ಎಂದು ತಿಳಿಸಿದರು.
ಕಳೆದ ಸಾಲಿನಂತೆ ಈ ಬಾರಿಯೂ ಸಾರ್ವಜನಿಕರ ಪ್ರವೇಶವನ್ನು ತಡೆಯಲಾಗಿದ್ದು, ಗಣ್ಯರು ಮತ್ತು ಆಹ್ವಾನಿತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ, ಈ ಕಾರ್ಯಕ್ರಮದಲ್ಲಿ ಕೋವಿಡ್ ಮಾರ್ಗಸೂಚಿಗಳು ಉಲ್ಲಂಘನೆ ಅಗದಂತೆಯೂ ಎಚ್ಚರಿಕೆ ವಹಿಸಲಾಗಿದೆ ಎಂದು ಆಯುಕ್ತರು ಹೇಳಿದರು.
ಆಸ್ತಿ ತೆರಿಗೆ ಸಂಗ್ರಹ: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಸರ್ಕಾರಿ ಸ್ವಾಮ್ಯದ ಆಸ್ತಿ ತೆರಿಗೆ ಪ್ರಕ್ರಿಯೆಯೂ ಸದ್ಯಕ್ಕೆ ಚಾಲ್ತಿಯಲ್ಲಿ ದೆ.ಜೊತೆಗೆ, ಸೇವಾ ಶುಲ್ಕವನ್ನು ಪಾವತಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ಗಮನಕ್ಕೆ ತರಲಾಗುವುದು ಎಂದು ಗೌರವ್ ಗುಪ್ತ ನುಡಿದರು.
ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ಬಿಬಿಎಂಪಿ ವಿಶೇಷ ಆಯುಕ್ತರಾದ ಮನೋಜ್ ಜೈನ್, ರವೀಂದ್ರ, ದಯಾನಂದ್ ಸೇರಿದಂತೆ ಪ್ರಮುಖರಿದ್ದರು.