ಮೈಸೂರು, ಏ.23-ರಾಮನಗರ-ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಕುಮಾರಸ್ವಾಮಿ ಅವರು ಗೆಲ್ಲುವುದಿಲ್ಲ. ಈ ಬಾರಿಯ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದರು.
ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಭೇಟಿಯಾದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಸೋಲಿನ ಭೀತಿಯಿಂದ ಬಾದಾಮಿಯಲ್ಲಿ ಸ್ಪರ್ಧಿಸುತ್ತಿಲ್ಲ. ಆ ಭಾಗದ ಜನರ ಒತ್ತಡದ ಹಿನ್ನೆಲೆಯಲ್ಲಿ ಅಲ್ಲಿ ಸ್ಪರ್ಧಿಸುತ್ತೇನೆ. ನಾನು ಅಲ್ಲಿ ಸ್ಪರ್ಧಿಸುವುದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬುದು ಜನರ ಒತ್ತಾಸೆಯಾಗಿದೆ. ಹಾಗಾಗಿ ಅಲ್ಲಿ ಸ್ಪರ್ಧಿಸುತ್ತೇನೆ. ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ನನ್ನದೇ. ಚಾಮುಂಡೇಶ್ವರಿ ಕ್ಷೇತ್ರಕ್ಕೆ ಪ್ರಚಾರಕ್ಕಾಗಿ ಯಾವುದೇ ಸ್ಟಾರ್ಗಳನ್ನು ಕರೆತರುವುದಿಲ್ಲ. ಬಾದಾಮಿ ಕ್ಷೇತ್ರದ ಪ್ರಚಾರಕ್ಕೆ ಹೋಗದೆ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕದಲ್ಲಿ ಬಿಜೆಪಿ, ಹಳೇ ಮೈಸೂರಿನಲ್ಲಿ ಜೆಡಿಎಸ್ ನಮಗೆ ಎದುರಾಳಿ. ಎರಡೂ ಪಕ್ಷಗಳನ್ನು ಸಮರ್ಥವಾಗಿ ಎದುರಿಸಿ ಜಯಗಳಿಸುತ್ತೇವೆ.
ಅಂಬರೀಶ್ ಅವರಿಗೆ ಟಿಕೆಟ್ ನೀಡಲಾಗಿದೆ. ಸ್ಪರ್ಧಿಸುವುದು ಅಥವಾ ಸ್ಪರ್ಧೆಯಿಂದ ಹಿಂದೆ ಸರಿಯುವುದು ಅವರಿಗೆ ಬಿಟ್ಟ ವಿಚಾರ. ಅವರು ಸ್ಪರ್ಧಿಸುವುದಿಲ್ಲ ಎಂದಾದರೆ ಹೈಕಮಾಂಡ್ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದು ಅವರು ಹೇಳಿದರು.