ಕೋಲ್ಕತಾ, ಏ.25-ಕಾಂಗ್ರೆಸ್‍ಗೆ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಏಕಾಂಗಿಯಾಗಿ ಬಿಜೆಪಿ ವಿರುದ್ಧ ಸೆಣಸಲು ಸಾಧ್ಯವಾಗುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಶ್ಲೇಷಣೆ ಮಾಡಿದ್ದಾರೆ.
ಪ್ರಸ್ತುತ ಸನ್ನಿವೇಶದಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಚುನಾವಣೆ ಮತ್ತು ಸ್ಥಾನ ಹೊಂದಾಣಿಕೆ ಮಾಡಿಕೊಂಡು ಸ್ಪರ್ಧಿಸುವುದು ಕಾಂಗ್ರೆಸ್‍ಗೆ ಸೂಕ್ತ ಎಂದು ಅವರು ಕಾರ್ಯಕ್ರಮವೊಂದರಲ್ಲಿ ಸಲಹೆ ಮಾಡಿದ್ದಾರೆ.
ಕನಿಷ್ಠ ಕಾರ್ಯಸೂಚಿಗಳೊಂದಿಗೆ ವಿರೋಧ ಪಕ್ಷಗಳು ಒಗ್ಗೂಡಿದರೆ ಫೆಡರಲ್ ಫ್ರಂಟ್ ಕಲ್ಪನೆಯೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿಯನ್ನು ಸೋಲಿಸಲು ಸಾಧ್ಯ. ಈಗಿನ ಸನ್ನಿವೇಶದಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಏನೂ ಮಾಡಲು ಸಾಧ್ಯವಿಲ್ಲ. ಎಲ್ಲ ರಾಜ್ಯದ ಪ್ರಮುಖ ಪ್ರಾದೇಶಿಕ ಪಕ್ಷಗಳೊಂದಿಗೆ ಕೈಜೋಡಿಸಿ ಚುನಾವಣಾ ಕಣಕ್ಕೆ ಇಳಿಯುವುದು ಒಳ್ಳೆಯದು ಎಂದು ಮಮತಾ ಹೇಳಿದ್ದಾರೆ.
ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ ಪಾರ್ಟಿ(ಟಿಡಿಪಿ), ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಎಐಎಡಿಂಎಂಕೆ ಹಾಗೂ ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ಕಾಂಗ್ರೆಸ್‍ಗೆ ಅನಿವಾರ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.