ಜೆಡಿಎಸ್-ಬಿಎಸ್‍ಪಿ ಹೊಂದಾಣಿಕೆ ಮಾಡಿಕೊಂಡು ಸ್ಪರ್ಧೆಗಿಳಿದಿದ್ದರೂ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಅಧಿಕೃತ ಅಭ್ಯರ್ಥಿಗಳಿಲ್ಲ…

ಬೆಂಗಳೂರು, ಏ.29- ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಎಸ್‍ಪಿ ಹೊಂದಾಣಿಕೆ ಮಾಡಿಕೊಂಡು ಸ್ಪರ್ಧೆಗಿಳಿದಿದ್ದರೂ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಅಧಿಕೃತ ಅಭ್ಯರ್ಥಿಗಳಿಲ್ಲ.

ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಕ್ಷೇತ್ರಗಳ ಹಂಚಿಕೆ ಮಾಡಿಕೊಂಡಿದ್ದರೂ ಕೊನೆ ಕ್ಷಣದಲ್ಲಿ ಟಿಕೆಟ್ ನೀಡಿಕೆಯಲ್ಲಿ ಉಂಟಾದ ಗೊಂದಲದಿಂದಾಗಿ ಐದೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಥವಾ ಬಿಎಸ್‍ಪಿ ಅಭ್ಯರ್ಥಿಗಳ ಸ್ಪರ್ಧೆ ಇಲ್ಲದಂತಾಗಿದೆ.
ಹುನಗುಂದ, ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಪಶ್ಚಿಮ, ಮಂಗಳೂರು ಉತ್ತರ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರಗಳಲ್ಲಿ ಉಭಯ ಪಕ್ಷಗಳ ಅಭ್ಯರ್ಥಿಗಳಿಲ್ಲ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 201 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಿದ್ದರೆ 18 ಕ್ಷೇತ್ರಗಳಲ್ಲಿ ಬಿಎಸ್‍ಪಿ ಸ್ಪರ್ಧಿಸಿದೆ. ಚುನಾವಣಾ ಪೂರ್ವ ಮೈತ್ರಿಯಂತೆ ಜೆಡಿಎಸ್, ಬಿಎಸ್‍ಪಿಗೆ 20 ಕ್ಷೇತ್ರಗಳನ್ನು ಬಿಟ್ಟುಕೊಟ್ಟಿತ್ತು. ಜೆಡಿಎಸ್ 204 ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕಿತ್ತು.
ಬಬಲೇಶ್ವರದಲ್ಲಿ ಬಿಎಸ್‍ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಡಗಪ್ಪ ಸಾಲಗಾರ್ ಹಾಗೂ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಲ್ತಾಫ್ ಕಿತ್ತೂರ್ ನಾಮಪತ್ರ ವಾಪಸ್ ಪಡೆದಿದ್ದಾರೆ.

ಆದರೆ, ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನ ಬಸವರಾಜ ದಿಗ್ಗಾವಿ ಹಾಗೂ ಬಿಎಸ್‍ಪಿಯ ಎಸ್.ನಿಂಬಾಳ್ಕರ್ ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯುವ ಅವಧಿ ಮುಗಿದಿರುವುದರಿಂದ ಇಬ್ಬರಲ್ಲಿ ಯಾರಾದರೂ ಒಬ್ಬರು ನಿವೃತ್ತಿಯಾಗಬೇಕು. ಈ ಬಗ್ಗೆ ಉಭಯ ಪಕ್ಷಗಳಲ್ಲಿ ಸಮಾಲೋಚನೆ ನಡೆಸುತ್ತಿದ್ದು, ಯಾರು ನಿವೃತ್ತಿಯಾಗುತ್ತಾರೆ ಎಂಬುದನ್ನು ಕಾದು ನೋಡಬೇಕು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ