ಜೆಡಿಎಸ್‍ನೊಂದಿಗೆ ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ : ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಮೈಸೂರು, ಮೇ 6- ಜೆಡಿಎಸ್‍ನೊಂದಿಗೆ ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿಂದು ಕೃಷ್ಣರಾಜ, ಚಾಮರಾಜ, ನರಸಿಂಹರಾಜ ಕ್ಷೇತ್ರಗಳ ಪ್ರಣಾಳಿಕೆ ಬಿಡುಗಡೆ ಮಾಡಿ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‍ನವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಯಾವುದೇ ಕಾರಣಕ್ಕೂ ಜೆಡಿಎಸ್‍ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅಂತಹ ಪ್ರಮೇಯವೇ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ನಮ್ಮ ಪಕ್ಷ ಬಹುಮತದೊಂದಿಗೆ ಗೆದ್ದು ಬರಲಿದೆ. ಹೀಗಿರುವಾಗ ನಾವೇಕೆ ಜೆಡಿಎಸ್ ಜತೆ ಒಪ್ಪಂದ ಮಾಡಿಕೊಳ್ಳಬೇಕು ಎಂದು ವರದಿಗಾರರ ಪ್ರಶ್ನೆಗೆ ಉತ್ತರಿಸಿದರು.

ವ್ಯಕ್ತಿಗತ ಮಾತಿನ ದಾಳಿಯನ್ನು ನಾವು ಮಾಡಿಲ್ಲ. ಇದನ್ನು ಆರಂಭ ಮಾಡಿದ್ದೇ ಕಾಂಗ್ರೆಸ್‍ನವರು. ನಮ್ಮ ಸಾಧನೆಗಳನ್ನು ಸಭೆ-ಸಮಾರಂಭಗಳಲ್ಲಿ ಹೇಳಿದ್ದೇವೆ. ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಮಾಡಿಲ್ಲ ಎಂದು ತಿಳಿಸಿದ್ದೇವೆ. ಆದರೆ, ವ್ಯಕ್ತಿಗತ ಮಾತಿನ ದಾಳಿಯನ್ನು ಎಲ್ಲೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಮಹದಾಯಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸದಾನಂದಗೌಡ, ಈ ಕುರಿತು ರಾಜ್ಯದ ಜನತೆಯಲ್ಲಿ ಬಿಜೆಪಿ ವಿರುದ್ಧ ಎತ್ತಿ ಕಟ್ಟುವ ಕೆಲಸವನ್ನು ಕಾಂಗ್ರೆಸ್‍ನವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಮ್ಮ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಈಡೇರಿಸುತ್ತೇವೆ. ನಮ್ಮ ಪ್ರಣಾಳಿಕೆ ರಾಜ್ಯ, ಜಿಲ್ಲೆ ಹಾಗೂ 224 ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಕುರಿತದ್ದಾಗಿದೆ. ಅದೇ ರೀತಿ ಮೈಸೂರಿನ ಚಾಮರಾಜ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರಗಳ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದ್ದೇವೆ. ಇದರಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಐದು ವರ್ಷದಲ್ಲಿ ಮಾಡಲಾಗುವುದು. ಮೈಸೂರನ್ನು ಪ್ರವಾಸಿ ತಾಣವನ್ನಾಗಿ ಇನ್ನೂ ಹೆಚ್ಚು ಅಭಿವೃದ್ಧಿಪಡಿಸಲು ಆದ್ಯತೆ ನೀಡಲಾಗುತ್ತದೆ. ಸ್ವಚ್ಛ ನಗರ, 2್ಡ47 ಕುಡಿಯುವ ನೀರು, ಪಾರಂಪರಿಕ ನಗರ ಹೆಸರು ಉಳಿಯುವಂತೆ ಮಾಡಲಾಗುವುದು. ಇದೂ ಸೇರಿದಂತೆ ಹಲವು ಯೋಜನೆಗಳನ್ನು ನಗರಕ್ಕೆ ಹಾಕಿಕೊಂಡಿದ್ದೇವೆ. ಇವೆಲ್ಲವೂ ಈಡೇರಲಿವೆ ಎಂದು ಸದಾನಂದಗೌಡ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ