ಹಾಸನ, ಮೇ 21- ಮೈತ್ರಿ ಸರ್ಕಾರದಲ್ಲಿ ಸಿಎಂ ಹುದ್ದೆ ನಿಭಾಯಿಸುವುದು ದೊಡ್ಡ ಸವಾಲಾಗಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ಜೊತೆಗೆ ಐದು ವರ್ಷಗಳ ಕಾಲ ಸುಭದ್ರ ಆಡಳಿತ ನೀಡಲು ಸಂಕಲ್ಪ ತೊಟ್ಟಿದ್ದೇನೆ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು.
ಪತ್ನಿ ಅನಿತಾ ಜೊತೆ ಹಾಸನ ಜಿಲ್ಲೆಯ ಹೊಳೆನರಸೀಪುರಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಮುಂದಿರುವ ಎಲ್ಲಾ ಸವಾಲುಗಳನ್ನು ನಿಭಾಯಿಸಿ ಉತ್ತಮ ಆಡಳಿತ ನೀಡುವುದೇ ನಮ್ಮ ಗುರಿಯಾಗಿದೆ. ಈ ಬಾರಿ ಮುಖ್ಯಮಂತ್ರಿ ಹುದ್ದೆ ನಿರ್ವಹಣೆ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಎಲ್ಲರ ಅಭಿಪ್ರಾಯಗಳನ್ನು ಸೂಕ್ಷ್ಮವಾಗಿ ತಾವು ಗಮನಿಸುತ್ತಿದ್ದು , ನನ್ನ ನಿದ್ದೆಗೆಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶ್ರೀರಾಮುಲು ಹಾಗೂ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ನಾವು ಅವರನ್ನೇ ನಿದ್ದೆಗೆಡೆಸುತ್ತೇವೆ ಎಂದರು.
ನಾನು ಹುಟ್ಟಿ ಬೆಳೆದ ಜಿಲ್ಲೆಯ ಲಕ್ಷ್ಮಿ ನರಸಿಂಹಸ್ವಾಮಿ ದೇವರು ಹಾಗೂ ಹರದನಹಳ್ಳಿಯ ಶಿವನ ಆಶೀರ್ವಾದ ಪಡೆಯಲು ಇಲ್ಲಿಗೆ ಬಂದಿರುವುದಾಗಿ ತಿಳಿಸಿದರು.
ಮಧ್ಯಾಹ್ನ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹಾಗೂ ನನಗೆ ಬೆಂಬಲ ನೀಡಿರುವ ಕಾಂಗ್ರೆಸ್ ವರಿಷ್ಠರ ಜೊತೆ ಮಾತುಕತೆ ನಡೆಸುವುದಾಗಿ ತಿಳಿಸಿದರು.
ಮೈತ್ರಿ ಸರ್ಕಾರವನ್ನು ಮತ್ತಷ್ಟು ಸದೃಢಗೊಳಿಸಲು ಮುಂದಾಗಿದ್ದೇವೆ. ಸಚಿವ ಸಂಪುಟ ರಚನೆ, ಸಮನ್ವಯ ಸಮಿತಿ ರಚನೆ ಸೇರಿದಂತೆ ಇನ್ನಿತರ ಮಹತ್ವದ ವಿಚಾರಗಳ ಮಾತುಕತೆ ನಡೆಸಲಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಜೊತೆ ಚರ್ಚಿಸಿ ಕಾಂಗ್ರೆಸ್ಗೆ ಎಷ್ಟು ಸಚಿವ ಸ್ಥಾನ ನೀಡಬೇಕೆಂಬ ಬಗ್ಗೆ ಹಾಗೂ ಡಿಸಿಎಂ ಹುದ್ದೆ ಸೇರಿದಂತೆ ಎರಡು ಪಕ್ಷಗಳ ನಡುವೆ ಸಮನ್ವಯದ ಬಗ್ಗೆಯೂ ಚರ್ಚಿಸುವುದಾಗಿ ತಿಳಿಸಿದರು.
ಆಸೆ-ಆಕಾಂಕ್ಷೆಗಳಿಗಾಗಿ ಈ ಸ್ಥಾನ ಅಲಂಕರಿಸುತ್ತಿಲ್ಲ. ಬದಲಿಗೆ ಜವಾಬ್ದಾರಿ ನಿರ್ವಹಿಸಲು ಮುಂದಾಗಿದ್ದೇನೆ. ಶ್ರಮವಹಿಸಿ ಕೆಲಸ ಮಾಡುತ್ತೇನೆ. ರಾಜ್ಯದ ಜನರ ಸಮಸ್ಯೆ ಮತ್ತು ಅಭಿಪ್ರಾಯಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಅವರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.