ರೈತರ ಸಾಲ ಮನ್ನಾಗೆ ಆಗ್ರಹಿಸಿ ಕರ್ನಾಟಕ ಬಂದ್, ನೀರಸ ಪ್ರತಿಕ್ರಿಯೆ

ಬೆಂಗಳೂರು,ಮೇ 28

ರೈತರ ಸಾಲ ಮನ್ನಾಗೆ ಆಗ್ರಹಿಸಿ ಬಿಜೆಪಿ ನೀಡಿದ್ದ ಕರ್ನಾಟಕ ಬಂದ್ ಕರೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಹಲವು ಜಿಲ್ಲೆಗಳಲ್ಲಿ ಬಸ್ ಸಂಚಾರ ಸುಗಮವಾಗಿ ನಡೆಯುತ್ತಿದೆ.

ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ಮಧ್ಯೆ ಟೈರ್ ಗಳನ್ನು ಸುಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಹಲವೆಡೆ ಕಾರ್ಯಕರ್ತರು ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಬಿಜೆಪಿ ಕಾರ್ಯಕರ್ತರು ಬನ್ನಿಮಂಟಪದ ಡಿಪೋ ಬಳಿ ಸರ್ಕಾರಿ ಬಸ್ ಅನ್ನು ತಡೆಯಲು ಯತ್ನಿಸಿದಾಗ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ನಿರ್ಮಾಣವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಜತೆಗೂಡಿ ಸರ್ಕಾರ ನಡೆಸುತ್ತಿದ್ದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಜೆಡಿಎಸ್ ನ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಬಗ್ಗೆ ದ್ವಂದ್ವ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು ಬಂದ್ ಗೆ ಕರೆ ನೀಡಿದ್ದರು.

ಬಿಜೆಪಿ ನೀಡಿರುವ ರಾಜ್ಯ ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸದ ಹಿನ್ನೆಲೆಯಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ