ನವದೆಹಲಿ:ಮೇ-29: ರೈತರ ಸಾಲವನ್ನು ಮನ್ನಾ ಮಾಡುವುದಾಗಿ ನೀಡಿರುವ ಭರವಸೆ ಈಡೇರಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಬೆಂಗಳೂರಿನಲ್ಲಿ ಬುಧವಾರ ಸೂಕ್ತ ಮಾರ್ಗಸೂಚಿ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲ ಮನ್ನಾ ಕುರಿತು ಬಿಜೆಪಿ ಇಲ್ಲಸಲ್ಲದ ಆರೋಪ ಮಾಡುತ್ತ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಬಿಜೆಪಿ ಮುಖಂಡರು ನಮಗೆ ಉಸಿರಾಡುವುದಕ್ಕೂ ಸಮಯಾವಕಾಶ ನೀಡದೆ ಈ ರೀತಿ ಅವಸರ ತೋರುತ್ತಿರುವುದು ಸರಿಯಲ್ಲ ಎಂದರು.
ಚುನಾವಣೆ ಪ್ರಣಾಳಿಕೆಯಲ್ಲಿ ತಿಳಿಸಿರುವಂತೆಯೇ ನಾನು ರೈತರ ಸಾಲವನ್ನು ಮನ್ನಾ ಮಾಡುವ ಕುರಿತು ಚಿಂತನೆ ನಡೆಸುತ್ತಿದ್ದೇನೆ. ಯಾವುದೇ ಕಾರಣಕ್ಕೂ ಈ ವಿಷಯದಲ್ಲಿ ಹಿಂದಿರುಗಿ ನೋಡುವ ಪ್ರಶ್ನೆಯೇ ಇಲ್ಲ. ಒಂದೊಮ್ಮೆ ರೈತರ ಸಾಲ ಮನ್ನಾ ಮಾಡಲು ಆಗದಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಈಗಾಗಲೇ ತಿಳಿಸಿದ್ದೇನೆ. ಸಾಧಕ– ಬಾಧಕಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿ ಬುಧವಾರ ಈ ಕುರಿತ ಮಾರ್ಗಸೂಚಿ ಪ್ರಕಟಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ಇದೇವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ರೈತರ ಬಗ್ಗೆ ತೀವ್ರ ಕಾಳಜಿ ವ್ಯಕ್ತಪಡಿಸುತ್ತಿರುವ ಬಿ.ಎಸ್. ಯಡಿಯೂರಪ್ಪ, ತಮ್ಮ ಆಡಳಿತದ ಅವಧಿಯಲ್ಲಿ ರೈತರ ಸಮಸ್ಯೆ ನಿವಾರಣೆಗೆ ಯಾವ ಕ್ರಮ ಕೈಗೊಂಡಿದ್ದಾರೆ, ಹೇಗೆ ಸ್ಪಂದಿಸಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಮೈತ್ರಿಕೂಟ ಸರ್ಕಾರದ ಭಾಗವಾಗಿರುವ ಕಾಂಗ್ರೆಸ್ ಪಕ್ಷದ ಸಲಹೆ– ಸೂಚನೆ ಪಡೆದು ಮುಂದುವರಿಯುವ ಅನಿವಾರ್ಯತೆ ಇರುವುದರಿಂದ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಿದೆ ಎಂದರು.
‘ರೈತರು ಮಾತ್ರವಲ್ಲ. ನಾಡಿನ ಜನಸಾಮಾನ್ಯರ ಸಮಸ್ಯೆಗಳ ಕುರಿತು ವೈಯಕ್ತಿಕವಾಗಿ ಅಹವಾಲು ಸ್ವೀಕರಿಸಿರುವ ಮೊದಲ ಮುಖ್ಯಮಂತ್ರಿ ನಾನೇ. ಜನರು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆ ವಿಷಯದಲ್ಲಿ, ಬಿಜೆಪಿ ಮುಖಂಡರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಇಂತಹ ವಿಷಯಗಳಲ್ಲಿ ಸುಮ್ಮನೆ ಕೂರುವುದಿಲ್ಲ. ಸುಮ್ಮನೆ ಕೂರುವುದಕ್ಕೆ ನಾನು ಯಡಿಯೂರಪ್ಪ ಅಲ್ಲ’ಎಂದು ತಿರುಗೇಟು ನೀಡಿದರು.