ಬೆಂಗಳೂರು, ಮೇ 30-ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್ಐಟಿ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿದೆ.
ಸಾಹಿತಿ ಕೆ.ಎಸ್.ಭಗವಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಡಿ ಬಂಧಿಸಿರುವ ನಾಲ್ವರು ಆರೋಪಿಗಳಿಂದ ಎಸ್ಐಟಿ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ.
ಆರೋಪಿಗಳಾದ ಶಿಕಾರಿಪುರದ ಕಪ್ಪನಹಳ್ಳಿ ಗ್ರಾಮದ ಸುಜೀತ್ಕುಮಾರ್ ಅಲಿಯಾಸ್ ಪ್ರವೀಣ್ (37), ಮಹಾರಾಷ್ಟ್ರದ ಅಮೋಲ್ ಕಾಳೆ ಅಲಿಯಾಸ್ ಬಾಯ್ ಸಾಬ್, ಅಮಿತ್ ದೇಗ್ವೇಕರ್ ಅಲಿಯಾಸ್ ಪ್ರದೀಪ್ (38) ಹಾಗೂ ವಿಜಯಪುರ ಜಿಲ್ಲೆ ರತ್ನಾಪುರ ಗ್ರಾಮದ ಮನೋಹರ್ ದುಂಡಪ್ಪ ಯಡವೆ ಅಲಿಯಾಸ್ ಮನೋಜ್ (29) ನನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದೆ.
ಸಾಹಿತಿ ಕೆ.ಎಸ್.ಭಗವಾನ್ ಅವರ ಕೊಲೆಗೆ ಸಂಚು ರೂಪಿಸಿದ್ದು ತನಿಖೆ ವೇಳೆ ಈ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಗೌರಿಲಂಕೇಶ್ ಹತ್ಯೆ ಪ್ರಕರಣದಲ್ಲಿ ಇವರ ಪಾತ್ರ ಇದೆಯೇ ಎಂಬ ಬಗ್ಗೆಯೂ ಎಸ್ಐಟಿ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.