ದಾವಣಗೆರೆ, ಜೂ.7- ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಮೈತ್ರಿ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡದೆ ಇರುವುದಕ್ಕೆ ಜಿಲ್ಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಮೈತ್ರಿ ಸರ್ಕಾರದಲ್ಲಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಮಂತ್ರಿ ಸ್ಥಾನ ಖಚಿತ ಎಂದು ಭಾವಿಸಲಾಗಿತ್ತು. ಆದರೆ ಮೊದಲ ಮಂತ್ರಿ ಮಂಡಲ ವಿಸ್ತರಣೆ ವೇಳೆ ಶಿವಶಂಕರಪ್ಪ ಅವರಿಗೆ ಸ್ಥಾನ ನೀಡದೆ ಇರುವುದಕ್ಕೆ ಜಿಲ್ಲಾ ಕಾಂಗ್ರೆಸ್ ಮುಖಂಡರು , ಕಾರ್ಯಕರ್ತರು, ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ.
ನಗರದಲ್ಲಿ ತುರ್ತು ಸಭೆ ನಡೆಸಿದ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮಹಾನಗರ ಪಾಲಿಕೆ ಸದಸ್ಯರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್, ಕೆ.ಶೆಟ್ಟಿ ಅವರು ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಡಾ.ಶಿವಶಂಕರಪ್ಪ ಅವರು ಒಮ್ಮೆ ಅವಿಭಜಿತ ಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಮೂರ್ನಾಲ್ಕು ಬಾರಿ ಶಾಸಕರಾಗಿ , ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಶಾಸಕರು ಜಿಲ್ಲಾ ಕಾಂಗ್ರೆಸ್ ಹಿರಿಯ ಮುಖಂಡರು ಆದ ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನವನ್ನು ನೀಡದೆ ಇರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದಲ್ಲದೆ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ. ನಗರದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸುವ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.