ಬೆಂಗಳೂರು, ಜು.17- ಶೇ.10ರಿಂದ 30ರವರೆಗೆ ರಿಯಾಯ್ತಿ ದರದಲ್ಲಿ ಮೈಸೂರು ಸಿಲ್ಕ್ ಸೀರೆಗಳನ್ನು ಕೊಡಲು ತೀರ್ಮಾನಿಸಲಾಗಿದೆ ಎಂದು ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಮಹಾಲಕ್ಷ್ಮಿ ಹಬ್ಬಕ್ಕೆ ಯಾವ ಸೀರೆ ಕೊಡಬೇಕು ಎಂಬುದು ಇನ್ನೂ ತೀರ್ಮಾನವಾಗಿಲ್ಲ. ಮೈಸೂರು ಸಿಲ್ಕ್ ಕಾರ್ಖಾನೆ ರೈತರ ಕಾರ್ಖಾನೆಯಾಗಿದೆ. ವರಮಹಾಲಕ್ಷ್ಮಿ ಹಬ್ಬದಂದು 4500 ರೂ. ಮೊತ್ತದ ಸೀರೆಗಳನ್ನು ಕೊಡಲು ತೀರ್ಮಾನಿಸಲಾಗಿದ್ದು, ಆರ್ಥಿಕವಾಗಿ ದುರ್ಬಲರಾಗಿರುವವರೆಗೂ ಮೈಸೂರು ಸಿಲ್ಕ್ ಸೀರೆ ಕೊಡಲು ಉದ್ದೇಶಿಸಿದ್ದು, ವಾರ್ಷಿಕ ಕನಿಷ್ಠ 25 ಸಾವಿರ ಸೀರೆ ಕೊಡಲು ಯೋಚಿಸಲಾಗಿದೆ ಎಂದರು.
ಮಿಶ್ರತಳಿ ರೇಷ್ಮೆ ಗೂಡಿನ ಬೆಲೆ ಕುಸಿತವಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ರಾಮನಗರ ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರು ಪ್ರತಿಭಟನೆ ನಡೆಸಿರುವುದು ಗಮನಕ್ಕೆ ಬಂದಿದೆ. ರೇಷ್ಮೆ ಗೂಡಿನ ಬೆಲೆ ಕುಸಿತವಾಗಿರುವ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೂ ಕೂಡ ಸಮಾಲೋಚನೆ ನಡೆಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.