ಶಿಮ್ಲಾದ ಆಸ್ಪತ್ರೆಯಲ್ಲಿದ್ದ ಮೈಸೂರು ಮಹಿಳೆ ನಗರಕ್ಕೆ

 

ಬೆಂಗಳೂರು, ಆ. 2-ಕಳೆದ ಎರಡು ವರ್ಷಗಳಿಂದ ಶಿಮ್ಲಾದ ಆಸ್ಪತ್ರೆಯಲ್ಲಿದ್ದ ಮೈಸೂರು ಜಿಲ್ಲೆಯ ಮಹಿಳೆ ಇಂದು ನಗರಕ್ಕೆ ಹಿಂದಿರುಗುತ್ತಿದ್ದಾರೆ.
ಪತಿಯಿಂದ ಪರಿತ್ಯಕ್ತಳಾಗಿ ಮಾನಸಿಕ ಆಘಾತಕ್ಕೊಳಗಾಗಿದ್ದ ಮಹಿಳೆ ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ ಪತ್ತೆಯಾಗಿದ್ದರು. ನಂತರ ಕಳೆದ ಎರಡು ವರ್ಷಗಳಿಂದ ಶಿಮ್ಲಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಗಮನಿಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಮಹಿಳೆಯನ್ನು ರಾಜ್ಯಕ್ಕೆ ವಾಪಸ್ ಕರೆತರಲು ಹಾಗೂ ಸೂಕ್ತ ಚಿಕಿತ್ಸೆ ಮತ್ತು ಆಶ್ರಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಮೈಸೂರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು.
ಅದರಂತೆ ಶಿಮ್ಲಾಕ್ಕೆ ತೆರಳಿದ ತಂಡ ಮಹಿಳೆಯನ್ನು ವಾಪಸ್ ಕರೆತರುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ಈ ಮಹಿಳೆಯನ್ನು ಆಸ್ಪತ್ರೆಯಲ್ಲಿ ಆರೈಕೆ ಮಾಡಿದ ವೈದ್ಯರು ಹಾಗೂ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೆ ಮಹಿಳೆಯನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿ ಗೌರವಿಸಿದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರ ಕಾಳಜಿಯನ್ನು ಶ್ಲಾಘಿಸಿದ್ದಾರೆ.
ರಾಜ್ಯಕ್ಕೆ ಹಿಂದಿರುಗುತ್ತಿರುವ ಮಹಿಳೆಯನ್ನು ಶೀಘ್ರವೇ ಭೇಟಿ ಮಾಡುವುದಾಗಿ ತಿಳಿಸಿರುವ ಮುಖ್ಯಮಂತ್ರಿಯವರು, ಮಹಿಳೆಯ ಸಂಕಷ್ಟಕ್ಕೆ ಸ್ಪಂದಿಸಿ, ಕೂಡಲೇ ಆಕೆ ಹಿಂದಿರುಗಲು ವ್ಯವಸ್ಥೆ ಮಾಡಿದ ಮೈಸೂರು ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.
ಮಹಿಳೆಯ ಮುಂದಿನ ಜೀವನಕ್ಕೆ ಅಗತ್ಯ ನೆರವು ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ