ಬೆಂಗಳೂರಿನಲ್ಲಿ ನಡೆಯುತ್ತಿದ್ದ ಏರ್‍ಶೋವನ್ನು ಉತ್ತರ ಪ್ರದೇಶದ ಲಕ್ನೋಗೆ ಸ್ಥಳಾಂತರ

 

ಹುಬ್ಬಳ್ಳಿ, ಆ.12-ಬೆಂಗಳೂರಿನಲ್ಲಿ ನಡೆಯುತ್ತಿದ್ದ ಏರ್‍ಶೋವನ್ನು ಉತ್ತರ ಪ್ರದೇಶದ ಲಕ್ನೋಗೆ ಸ್ಥಳಾಂತರ ಮಾಡಿರುವ ಕ್ರಮ ಸರಿಯಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳಾಂತರ ಮಾಡದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ನಿರ್ಮಲಾಸೀತರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರೂ ಸ್ಥಳಾಂತರಕ್ಕೆ ಮುಂದಾಗಿದ್ದಾರೆ. ಬಿಜೆಪಿಯ ಯಡಿಯೂರಪ್ಪ, ಸದಾನಂದಗೌಡ, ಅನಂತ್‍ಕುಮಾರ್, ಜಗದೀಶ್‍ಶೆಟ್ಟರ್ ರಾಜ್ಯಕ್ಕೆ ಮಾಡಿರುವ ಅನ್ಯಾಯದ ಬಗ್ಗೆ ಪ್ರಶ್ನಿಸಲಿ. ಕೇಂದ್ರಕ್ಕೆ ನಿಯೋಗ ಕೊಂಡೊಯ್ದು ಏರ್‍ಶೋ ಬೆಂಗಳೂರಿಗೆ ವಾಪಸ್ ತರಲಿ ಎಂದ ಸವಾಲು ಹಾಕಿದರು.
ಅಖಂಡ ರಾಜ್ಯದ ಪರಿಕಲ್ಪನೆ ನಮ್ಮದು. ರಾಜ್ಯದ ಮೂಲೆ ಮೂಲೆಗೂ ಅನುದಾನ ಹಂಚಿಕೆಯಾಗಬೇಕು. ಪಶ್ಚಿಮವಾಹಿನಿ ನದಿಗಳ ತಿರುವು ಯೋಜನೆಗಳಿಗೆ ನಮ್ಮ ಸಹಮತವಿದೆ. ನೀರಾವರಿ ಯೋಜನೆಗಳ ಕುರಿತು ಚರ್ಚಿಸಲು ಇದೇ 20 ರಂದು ಕೇಂದ್ರ ಸಚಿವರನ್ನು ಭೇಟಿಯಾಗುವುದಾಗಿ ತಿಳಿಸಿದರು.
ಮಹದಾಯಿ ನದಿ ನೀರು ಹಂಚಿಕೆ ವಿವಾದ ನ್ಯಾಯಾಧೀಕರಣದ ಹೈ ತೀರ್ಪು ಹಿನ್ನೆಲೆಯಲ್ಲಿ ನೀರಾವರಿ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ತೀರ್ಪು ನಮ್ಮ ಪರವಾಗಿ ಬರಲಿದೆ ಎಂಬ ಆಶಾಭಾವನೆ ಹೊಂದಿದ್ದೇವೆ. ಆಲಮಟ್ಟಿ ಅಣೆಕಟ್ಟು ಎತ್ತರಿಸುವ ವಿಚಾರದಲ್ಲಿ ಭೂಸ್ವಾಧೀನ ವಿಳಂಬವಾಗುತ್ತಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ