ಪ್ರವಾಸಿಗರು ಮಡಿಕೇರಿ ಭಾಗದಲ್ಲಿ ಪ್ರವಾಸ ಕೈಗೊಳ್ಳುವುದು ಬೇಡ: ಸಚಿವ ಸಾ.ರಾ. ಮಹೇಶ್

 

ಬೆಂಗಳೂರು, ಆ.16-ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಪ್ರವಾಸಿಗರು ಮಡಿಕೇರಿ ಭಾಗದಲ್ಲಿ ಪ್ರವಾಸ ಕೈಗೊಳ್ಳುವುದು ಬೇಡ ಎಂದು ಪ್ರವಾಸೋದ್ಯಮ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಾ.ರಾ. ಮಹೇಶ್ ಮನವಿ ಮಾಡಿದ್ದಾರೆ.
ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ತೀವ್ರವಾಗಿರುವುದರಿಂದ ಪ್ರವಾಸಿಗರು ಕೊಡಗು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಬಾರದು ಎಂದು ಮನವಿ ಮಾಡಿದರು.

ಸಿದ್ದಾಪುರ, ಭಾಗಮಂಡಲ, ನಾಪೆÇೀಕ್ಲು, ವಿರಾಜಪೇಟೆ, ಕುಶಾಲನಗರಗಳಲ್ಲಿ ರಸ್ತೆಗಳಲ್ಲಿಯೇ 4 ರಿಂದ 6 ಅಡಿಯವರೆಗೆ ನೀರು ನಿಂತಿದ್ದು, ಸಂಚಾರ ಹಾಗೂ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ಹಾನಿಯಿಂದಾಗಿ ಸಾರ್ವಜನಿಕರಿಗೂ ಸಾಕಷ್ಟು ಸಮಸ್ಯೆ ಉಂಟಾಗಿದೆ.
ಕುಶಾಲನಗರದ ಸಾಯಿ ಬಡಾವಣೆ, ಕುವೆಂಪು ಬಡಾವಣೆ, ಮಾದಾಪಟ್ಟಣದಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಅಲ್ಲಿನ ಜನರನ್ನು ಜಿಲ್ಲಾಡಳಿತ ಸ್ಥಳಾಂತರ ಮಾಡಿದೆ. ಹಾರಂಗಿ ಜಲಾಶಯಕ್ಕೆ 75 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿರುವುದರಿಂದ ಜಲಾಶಯದಿಂದ ಹೊರಬಿಡುವ ನೀರಿನ ಪ್ರಮಾಣವನ್ನು ಹೆಚ್ಚಿಸಲಾಗಿದ್ದು, ನದಿ ಪಾತ್ರದ ಜನರು ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದರು.
ಕಾಟಗೇರಿ ಎಂಬಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ. ಮತ್ತೆ ಎರಡು ಕಡೆ ಇಬ್ಬರು ಪ್ರವಾಹದಲ್ಲಿ ಸಿಲುಕಿದ್ದು, ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ