ಬೆಂಗಳೂರು,ಆ.20- ಕಳೆದ ಏಪ್ರಿಲ್ ತಿಂಗಳಿನಿಂದ ತಡೆ ಹಿಡಿದಿರುವ ಕಮೀಷನ್ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಒತ್ತಾಯಿಸಿದೆ.
ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಪಡಿತರ ಆಹಾರಧಾನ್ಯಗಳನ್ನು ವಿತರಣೆ ಮಾಡುವವರಿಗೆ ಪ್ರತಿ ಕ್ವಿಂಟಾಲ್‍ಗೆ 13 ರೂ. ಕಮಿಷನ್ ಹಣವನ್ನು ನಿಗದಿಪಡಿಸಿ ಆದೇಶ ಹೊರಡಿಸಿದ್ದರು.
ಆದರೆ ಏಪ್ರಿಲ್‍ನಿಂದ ಇದುವರೆಗೂ ಹಣ ಬಿಡುಗಡೆಯಾಗಿಲ್ಲ.ಕೂಡಲೇ ಬಾಕಿ ಹಣವನ್ನುಬಿಡುಗಡೆ ಮಾಡಬೇಕೆಂದು ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ ಆಗ್ರಹಿಸಿದ್ದಾರೆ.
ಹಿಂದಿನ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದ ಯು.ಟಿ.ಖಾದರ್ ಕೂಡ ಕಮೀಷನ್ ಹಣ ಬಿಡುಗಡೆ ಮಾಡುವುದಕ್ಕೆ ಒಪ್ಪಿಗೆ ಸೂಚಿಸಿದ್ದರು.
ಹಾಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಈಗಿನ ಸಚಿವರಾದ ಜಮೀರ್ ಅಹಮ್ಮದ್ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಲಾಗಿದೆ. ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ಹಣ ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದರು.
ಆದರೂ ಕಳೆದ ಐದು ತಿಂಗಳಿನಿಂದ ಬರಬೇಕಾಗಿದ್ದ 40ರಿಂದ 50 ಕೋಟಿ ಬಾಕಿ ಹಣವನ್ನು ಬಿಡುಗಡೆ ಮಾಡದ ಕಾರಣ ನಾವು ಸಂಕಷ್ಟಕ್ಕೆ ಸಿಲುಕಿದ್ದೇವೆ ಎಂದು ನೋವು ತೋಡಿಕೊಂಡರು.
ನೆರೆಯ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಮತ್ತಿತರ ರಾಜ್ಯಗಳಲ್ಲಿ ಅಂದಿನ ತಿಂಗಳ ಕಮೀಷನ್ ಹಣವನ್ನು ಅಂದೇ ಬಿಡುಗಡೆ ಮಾಡುತ್ತಾರೆ. ಕರ್ನಾಟಕದಲ್ಲಿ ಮಾತ್ರ ಈ ರೀತಿ ಬಾಕಿ ಉಳಿಸಿಕೊಳ್ಳಲಾಗುತ್ತದೆ. ಸರ್ಕಾರ ಕೂಡಲೇ ನಮ್ಮ ಸಂಕಷ್ಟಕ್ಕೆ ನೆರವಾಗಬೇಕೆಂದು ಮನವಿ ಮಾಡಿದರು.
ಬೆಂಗಳೂರು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕೆಲವು ಜಾಗೃತಿ ಸಮಿತಿಯವರು ಸರ್ಕಾರಿ ಪಡಿತರ ವಿತರಕರ ಸಂಘದ ಮಾಲೀಕರಿಗೆ ಕಿರುಕುಳ ನೀಡುತ್ತಿದ್ದಾರೆ. ಒಂದಿಲ್ಲೊಂದು ಕಾನೂನು ನೆಪವೊಡ್ಡಿ ನಮಗೆ ತೊಂದರೆ ಕೊಡುತ್ತಿದ್ದಾರೆ. ಸರ್ಕಾರ ಈ ಬಗ್ಗೆ ಗಮನಹರಿಸಬೇಕೆಂದು ಒತ್ತಾಯಿಸಿದರು.
ಹಣ ಬಿಡುಗಡೆ ಮಾಡದ ಪರಿಣಾಮ ಇಂದು ಅನೇಕ ಕುಟುಂಬದವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂದಿನ ತಿಂಗಳು ಆಹಾರ-ಧಾನ್ಯಗಳನ್ನು ಎತ್ತುವಳಿ ಮಾಡಲು ಸಾಧ್ಯವಾಗುತ್ತಿಲ್ಲ. ಮಾನವೀಯತೆ ದೃಷ್ಟಿಯಿಂದಲಾದರೂ ಸರ್ಕಾರ ಸಮಸ್ಯೆಯನ್ನು ಪರಿಹರಿಸಬೇಕು. ಇಲ್ಲದಿದ್ದರೆ ಮುಂದಿನ ತಿಂಗಳು ಪಡಿತರ ಆಹಾರಧಾನ್ಯಗಳನ್ನು ವಿತರಣೆ ಮಾಡುವುದಕ್ಕೆ ಮರುಚಿಂತನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪದಾಧಿಕಾರಿಗಳ ಸಭೆ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಂಘದ ವತಿಯಿಂದ ಮುಂದಿನ ತಿಂಗಳು 25ರಂದು ದೆಹಲಿಯಲ್ಲಿ ಜೈಲ್ ಭರೋ ಕಾರ್ಯಕ್ರಮ ನಡೆಯುತ್ತಿದ್ದು, ಇದೇ ವೇಳೆ ಕೇಂದ್ರ ಸಚಿವರಿಗೆ ಅಭಿನಂದನೆ ಕಾರ್ಯಕ್ರಮ ನಡೆಸುವ ಬಗ್ಗೆ ನಾಳೆ 10.30ಕ್ಕೆ ನಗರದ ಕಾನಿಷ್ಕ ಹೋಟೆಲ್‍ನಲ್ಲಿ ತುರ್ತು ಸಭೆ ಕರೆಯಲಾಗಿದೆ. ಪ್ರತಿ ಮಂಗಳವಾರ ನ್ಯಾಯಬೆಲೆ ಅಂಗಡಿಗಳಿಗೆ ರಜೆ ಇರುವ ಕಾರಣ ಪ್ರತಿಯೊಬ್ಬರು ತಪ್ಪದೇ ಭಾಗವಹಿಸಬೇಕೆಂದು ಅವರು ಮನವಿ ಮಡಿದರು.