ಪಣಜಿ: ಅನಾರೋಗ್ಯ ಹಿನ್ನಲೆಯಲ್ಲಿ ಗೋವಾ ಮುಖ್ಯಮಂತ್ರಿ ಮತ್ತು ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಮ್ಮೆ ಅಮೆರಿಕಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
ಪ್ಯಾಂಕ್ರಿಯಾಟಿಕ್ಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಪರಿಕ್ಕರ್ ಅವರು ಅಮೆರಿಕದಲ್ಲಿ ಮೂರು ತಿಂಗಳ ಚಿಕಿತ್ಸೆ ಪಡೆದು ಜೂನ್ನಲ್ಲಿ ಸ್ವದೇಶಕ್ಕೆ ಹಿಂದಿರುಗಿದ್ದರು. ಆ ನಂತರ ಇತ್ತೀಚೆಗೆ ಮತ್ತೆ ಅಮೆರಿಕಕ್ಕೆ ತೆರಳಿ ಚಿಕಿತ್ಸೆ ಪಡೆದಿದ್ದರು. ಅವರು ಅಮೆರಿಕದಿಂದ ವಾಪಸ್ಸಾದ ಮಾರನೆಯ ದಿನ ಆಗಸ್ಟ್ 23 ರಂದು ಅವರು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು.
ಪರಿಕ್ಕರ್ ಅವರ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಯ ಕಂಡು ಬಂದಿದೆ. ಹೀಗಾಗಿ ಅವರು ಇಂದು ಸಂಜೆ 5 ಗಂಟೆಗೆ ಮತ್ತೊಮ್ಮೆ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ, ಗಾಬರಿ ಪಡುವ ಅಗತ್ಯವಿಲ್ಲ ಎಂದು ಗೋವಾ ವಿಧಾನಸಭೆ ಸ್ಪೀಕರ್ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.
ಪರಿಕ್ಕರ್ ಅವರ ಅನುಪಸ್ಥಿತಿಯಲ್ಲಿ ಆಡಳಿತವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದರ ಕುರಿತು ಮಾಹಿತಿ ಇಲ್ಲ. ಗೋವಾ ಬಿಜೆಪಿ ಅಧ್ಯಕ್ಷ ವಿನಯ್ ತೆಂಡುಲ್ಕರ್ ಅವರು ಇಂದು ಪರಿಕ್ಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಆ ನಂತರ ಈ ಸಂಬಂಧ ನಿಖರ ಮಾಹಿತಿ ಲಭ್ಯವಾಗಲಿದೆ ಎಂದು ಕೇಂದ್ರ ಆಯುಷ್ ಮಂತ್ರಿ ಶ್ರೀಪಾದ್ ನಾಯಕ್ ತಿಳಿಸಿದ್ದಾರೆ.
Manohar Parrikar,Fly To US Again, After Health Complications