ಬೆಂಗಳೂರು, ಆ.29-ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಬರ ಪರಿಸ್ಥಿತಿಗೆ ಹೆಚ್ಚಿನ ನೆರವು ಕೋರಲು ಪ್ರಧಾನಿ ಬಳಿಗೆ ರಾಜ್ಯ ಸರ್ಕಾರ ಸರ್ವಪಕ್ಷ ನಿಯೋಗವನ್ನು ಕೊಂಡೊಯ್ಯಬೇಕೆಂದು ಮಾಜಿ ಸಚಿವ ಬಸವರಾಜರಾಯರೆಡ್ಡಿ ಇಂದಿಲ್ಲಿ ಒತ್ತಾಯಿಸಿದರು.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೊಡಗು,ದಕ್ಷಿಣ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿಯಿಂದ ರೈತರು, ಹಾಗೂ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಅದೇ ರೀತಿ ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಭಾಗದಲ್ಲಿ ಬರ ಪರಿಸ್ಥಿತಿ ಇದೆ. ರಾಜ್ಯದ 14 ಜಿಲ್ಲೆ, 70 ತಾಲೂಕುಗಳಲ್ಲಿ ಮಳೆ ಕೊರತೆಯಿಂದ ಬರ ಪರಸ್ಥಿತಿ ಉಂಟಾಗಿದ್ದು, ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವಿಲ್ಲ. ಕುಡಿಯುವ ನೀರಿನ ಸಮಸ್ಯೆ ಇದೆ.
ರೈತರು ಕಳೆದ ವರ್ಷಕ್ಕಿಂತಲೂ ಹೆಚ್ಚು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹೆಚ್ಚಿನ ನೆರವನ್ನು ಕೋರಲು ಕೇಂದ್ರ ಸರ್ಕಾರದ ಬಳಿಗೆ ರಾಜ್ಯ ಸರ್ಕಾರ ಸರ್ವಪಕ್ಷ ನಿಯೋಗವನ್ನು ಕೊಂಡೊಯ್ಯಬೇಕು, 14ನೆ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಅದನ್ನು ಸರಿಪಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ರಾಜ್ಯದ ಸಂಸದರು ಒತ್ತಡ ಹೇರಬೇಕು. ಕಳೆದ ನಾಲ್ಕು ವರ್ಷದಲ್ಲಿ ವಾರ್ಷಿಕ 500 ಕೋಟಿ ಯಂತೆ 2ಸಾವಿರ ಕೋಟಿಯಷ್ಟು ಕಡಿಮೆ ಹಣ ರಾಜ್ಯಕ್ಕೆ ಬಂದಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ (ಎಸ್ಡಿಆರ್ಎಫ್)ರಾಜ್ಯ ಪ್ರಕೃತಿ ವಿಕೋಪ ನಿಧಿ ಹಾಗೂ (ಎನ್ಡಿಆರ್ಎಫ್) ರಾಷ್ಟ್ರೀಯ ಪ್ರಕೃತಿ ವಿಕೋಪ ನಿಧಿಯಡಿ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದೆ. ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಟೀಕಿಸಿದರು.
ಈ ಸಂಬಂಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆಯುವುದಾಗಿ ತಿಳಿಸಿದರು. ಎಸ್ಡಿಆರ್ಎಫ್, ಎನ್ಡಿಆರ್ಎಫ್ ಅಡಿ ತಲಾ 3 ಸಾವಿರ ಕೋಟಿ ಹಣ ಪಡೆಯಬೇಕು ಎಂದು ಒತ್ತಾಯಿಸಿದರು.
ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಪ್ರಕೃತಿ ವಿಕೋಪ ನಿಧಿಯಡಿ ಮೂರುವರೆ ಸಾವಿರ ಕೋಟಿ ಹಣ ಪಡೆಯಲು ಹಾಗೂ 14ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಉಂಟಾಗಿರುವ ಅನ್ಯಾಯ ಸರಿದೂಗಿಸಲು ರಾಜ್ಯಕ್ಕೆ 3 ಸಾವಿರ ಕೋಟಿ ಹಣವನ್ನು ಎಸ್ಡಿಆರ್ಎಫ್ಗೆ ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಕೊಡಬೇಕೆಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.