ಸೆ.25ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜ್ಯಕ್ಕೆ ಆಗಮನ

ಬೆಂಗಳೂರು,ಸೆ.8- ಲೋಕಸಭೆ ಚುನಾವಣೆಗೆ ಕೈಗೊಳ್ಳಬೇಕಾದ ರಣತಂತ್ರಗಳು, ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ಹಿಂದಿಕ್ಕಿ ಹೆಚ್ಚು ಸ್ಥಾನಗಳನ್ನು ಗಳಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಇದೇ 25ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ವಿಧಾನಸಭೆ ಚುನಾವಣೆ ಮುಗಿದ ಬಳಿಕ ಮೊದಲ ಬಾರಿಗೆ ಅಮಿತ್ ಷಾ ಅವರು ಪಕ್ಷದ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸುತ್ತಿರುವುದರಿಂದ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿವೆ.

ಈ ಹಿಂದೆ ವಿಧಾನಸಭೆ ಚುನಾವಣೆ ವೇಳೆ ಮಿಷನ್ 150 ಗುರಿಯೊಂದಿಗೆ ಬಿಜೆಪಿ ಚುನಾವಣಾ ಅಖಾಡಕ್ಕೆ ಧುಮುಕಿದ್ದರು. ನಿರೀಕ್ಷಿತ ಪ್ರಮಾಣದಲ್ಲಿ ಗುರಿ ತಲುಪದಿದ್ದರೂ 104 ಸ್ಥಾನ ಪಡೆಯುವುದರೊಂದಗೆ ಕಮಲ ಪಕ್ಷ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.
ಈಗ ಲೋಕಸಭಾ ಚುನಾವಣೆಯಲ್ಲಿ ಮಿಷನ್ 25 ಗುರಿಯೊಂದಿಗೆ ಕಾರ್ಯತಂತ್ರ ಹೆಣೆಯುತ್ತಿರುವ ಬಿಜೆಪಿ 28 ಲೋಕಸಭಾ ಕ್ಷೇತ್ರಗಳಲ್ಲಿ ಯಾವ ಯಾವ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು. ಹಾಲಿ ಸದಸ್ಯರಿಗೆ ಟಿಕೆಟ್ ನೀಡಬೇಕೆ ಇಲ್ಲವೆ ಹೊಸಬರಿಗೆ ಮಣೆ ಹಾಕಬೇಕೆ ಎಂಬುದರ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಲು ಆಗಮಿಸುತ್ತಿದ್ದಾರೆ.

ಸಾಮಾನ್ಯವಾಗಿ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಾರೆಂದರೆ ಅದರ ಹಿಂದೆ ರಣತಂತ್ರವೊಂದು ಅಡಗಿರುತ್ತದೆ ಎಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿಬರುತ್ತದೆ.
ಉತ್ತರ ಭಾರತದಲ್ಲಿ ಬಿಜೆಪಿಗೆ ನಷ್ಟವಾಗುವ ಸಂಖ್ಯೆಯನ್ನು ದಕ್ಷಿಣ ಭಾರತದಲ್ಲಿ ತುಂಬಿಕೊಳ್ಳಲು ಷಾ ರಣತಂತ್ರ ರೂಪಿಸುತ್ತಿದ್ದಾರೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಸೇರಿದಂತೆ ಮತ್ತಿತರ ಕಡೆ ಕಮಲವನ್ನು ಅರಳಿಸುವ ಮೂಲಕ ಕೇಂದ್ರದಲ್ಲಿ 2ನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯಲು ತನ್ನದೇ ಆದ ಕಾರ್ಯತಂತ್ರಗಳನ್ನು ರೂಪಿಸುತ್ತಿವೆ.

ಬೆಂಗಳೂರನ್ನು ಗುರಿಯಾಗಿಟ್ಟುಕೊಂಡು ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಲ್ಲೂ ಅಮಿತ್ ಷಾ ನಿಗಾ ವಹಿಸಲಿದ್ದಾರೆ. ಈಗಾಗಲೇ ಕೇರಳದಲ್ಲಿ ಚಿತ್ರನಟ ಮೋಹನ್ ಲಾಲ್, ತಮಿಳುನಾಡಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ಆಂಧ್ರಪ್ರದೇಶದಲ್ಲಿ ಪವನ್ ಕಲ್ಯಾಣ್ ಜೊತೆ ಬಿಜೆಪಿ ಕೈ ಜೋಡಿಸಲು ಮುಂದಾಗಿದೆ.
ತೆಲಾಂಗಣದಲ್ಲಿ ಹಂಗಾಮಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ವೇದಿಕೆ ಸಿದ್ದಪಡಿಸಿಕೊಂಡಿವೆ. ಹೀಗೆ ಬೆಂಗಳೂರಿನ ಮೂಲಕವೇ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಮಲವನ್ನು ಅರಳಿಸಲು ಷಾ ಮುಂದಾಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ