ಸೆ.10ರ ಭಾರತ್ ಬಂದ್‍ಗೆ ಜೆಡಿಎಸ್ ಬೆಂಬಲ

ಬೆಂಗಳೂರು, ಸೆ.8-ಪೆಟ್ರೋಲ್, ಡೀಸೆಲ್, ಅನಿಲ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಕರೆ ನೀಡಿರುವ ಭಾರತ್ ಬಂದ್‍ಗೆ ಜೆಡಿಎಸ್ ಬೆಂಬಲ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ಸೋಮವಾರ ನಡೆಯಲಿರುವ ಭಾರತ್ ಬಂದ್‍ಗೆ ಪೂರ್ಣ ಪ್ರಮಾಣದ ಬೆಂಬಲ ನೀಡಲಾಗುವುದು. ದೆಹಲಿಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಆಲಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್, ಪಕ್ಷದ ಶಾಸಕರು, ಮುಖಂಡರ ನೇತೃತ್ವದಲ್ಲಿ ನಗರದ ಪುರಭವನದ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ. ಮೈಸೂರಿನಲ್ಲಿ ತಮ್ಮ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದರು.
ಅಲ್ಲದೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲೂ ಪಕ್ಷದ ಮುಖಂಡರು, ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎಂದರು.

ಹಾಲು, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಗೆ ಬಂದ್ ವೇಳೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದ್ದು , ಮಾತಿನ ಮನೆಯ ಸರ್ಕಾರವಾಗಿದೆ. ಜನಸಾಮಾನ್ಯರಿಗೆ, ಬಡವರಿಗೆ ಅನುಕೂಲವಾಗುವಂತಹ ಯಾವುದೇ ಶಾಶ್ವತ ಕಾರ್ಯಕ್ರಮಗಳು ಜಾರಿಗೆ ಬರಲಿಲ್ಲ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ ಎಂದು ವಿಶ್ವನಾಥ್ ಟೀಕಾ ಪ್ರಹಾರ ನಡೆಸಿದರು.

ಬಡ ಜನರ ಬದುಕು ದುಸ್ತರವಾಗಿದೆ. ಸಾಮಾಜಿಕ ಶೋಭೆ ತಲೆದೋರಿದೆ. ಆರ್ಥಿಕ ಅರಾಜಕತೆ ಕಾಡುತ್ತಿದೆ. ಬ್ಯಾಂಕಿಂಗ್ ವ್ಯವಸ್ಥೆ ಬುಡ ಮೇಲಾಗಿದೆ. ಸಾವಿರಾರು ಕೋಟಿ ರೂ. ಸಾಲ ಮಾಡಿ ಪರಾರಿಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮನಮೋಹನಸಿಂಗ್ ಪ್ರಧಾನಿಯಾಗಿದ್ದಾಗ 50 ಸಾವಿರ ಕೋಟಿ ಇದ್ದ ಎನ್‍ಪಿಎ ಈಗ 2 ಲಕ್ಷ ಕೋಟಿಗೆ ಏರಿಕೆಯಾಗಿದೆ. ಕಪ್ಪು ಹಣ ವಿಚಾರದಲ್ಲೂ ಕೇಂದ್ರ ಸರ್ಕಾರ ಪರಿಣಾಮಕಾರಿಯಾದ ಕ್ರಮ ಕೈಗೊಳ್ಳಲಿಲ್ಲ. ನೋಟು ಅಮಾನ್ಯೀಕರಣ ಮಾಡಿ ಹೊಸ ನೋಟು ಮುದ್ರಿಸಿದವರಿಂದಲೇ ಜನಸಾಮಾನ್ಯರ ಮೇಲೆ ಹೊರೆ ಬಿದ್ದಿದೆ. ಪೆಟ್ರೋಲ್, ಡೀಸೆಲ್, ಸಿಲಿಂಡರ್ ಬೆಲೆ ನಿರಂತರವಾಗಿ ಏರಿಕೆಯಾಗಿದೆ. ಸದ್ಯದಲ್ಲೇ ಪೆಟ್ರೋಲ್ ಬೆಲೆ ಲೀಟರ್‍ಗೆ 100 ರೂ. ತಲುಪಿದರೂ ಆಶ್ಚರ್ಯ ಪಡಬೇಕಿಲ್ಲ ಎಂದರು.
ಜೆಡಿಎಸ್ ರಾಜ್ಯ ವಕ್ತಾರ ರಮೇಶ್ ಬಾಬು, ಜೆಡಿಎಸ್ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ