ಸ್ವಚ್ಛತಾ ಆಂದೋಲನಕ್ಕೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಆರ್.ಎಸ್.ಸಕ್ಸೇನಾ ಚಾಲನೆ

 

ಬೆಂಗಳೂರು, ಸೆ.15- ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಇಂದಿನಿಂದ ಅ.2ರವರೆಗೆ ಹಮ್ಮಿಕೊಂಡಿರುವ ಸ್ವಚ್ಛತಾ ಆಂದೋಲನಕ್ಕೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಆರ್.ಎಸ್.ಸಕ್ಸೇನಾ ಚಾಲನೆ ನೀಡಿದರು.
ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಆಂದೋಲನಕ್ಕೆ ಅವರು ಚಾಲನೆ ನೀಡಿದರು. ಐಸೆಕ್, ಇಕೋವಾಚ್ ಸೇರಿದಂತೆ ಸಂಘ-ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳು ಸ್ವಚ್ಛತಾ ಆಂದೋಲನದಲ್ಲಿ ಪಾಲ್ಗೊಂಡು ಸ್ವಚ್ಛತೆಯ ಅರಿವು ಮೂಡಿಸುವ ಫಲಕಗಳನ್ನು ಪ್ರದರ್ಶಿಸಿದರು.
ಈ ವೇಳೆ ಮಾತನಾಡಿದ ಸಕ್ಸೇನಾ, ಪ್ರಯಾಣಿಕರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗುವುದು, ಅಲ್ಲದೆ ಇಂದಿನಿಂದ ಅ.2ರವರೆಗೆ ಮಂಡ್ಯ, ಹಾಸನ, ಚನ್ನರಾಯಪಟ್ಟಣದಲ್ಲಿ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಗಿದೆ.

ರೈಲು ನಿಲ್ದಾಣವನ್ನು ಸ್ವಚ್ಛವಾಗಿರುವಂತೆ ನೋಡಿಕೊಳ್ಳುವುದು ಹಾಗೂ ಸ್ವಚ್ಛತೆಗೆ ಸಂಬಂಧಿಸಿದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು. ಅಲ್ಲದೆ ಗಿಡನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಇಕೋವಾಚ್‍ನ ನಿರ್ದೇಶಕ ಅಕ್ಷಯ್ ಹೆಬ್ಳೀಕರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನ ಆರಂಭಿಸಿದ್ದಾರೆ. ಪರಿಸರದ ಸ್ವಚ್ಛತೆ ಕಾಪಾಡುವುದು ಎಲ್ಲರ ಕರ್ತವ್ಯ. ಕಸವಿಲೇವಾರಿ ಹೇಗೆ ಮಾಡಬೇಕು, ಪರಿಸರದ ಬಗ್ಗೆ ಪ್ರಯಾಣಿಕರು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದರು.
ರೈಲು ನಿಲ್ದಾಣದ ನಿರ್ದೇಶಕ ಸಂತೋಷ್ ಹೆಗಡೆ ಸೇರಿದಂತೆ ರೈಲ್ವೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಇದೇ ವೇಳೆ ಸಕ್ಸೇನಾ ಅವರು ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ