ಬೆಂಗಳೂರು, ಸೆ.18- ನಾನು ಕಾಂಗ್ರೆಸ್ ಬಿಡುವುದಿಲ್ಲ. ಪಕ್ಷದಲ್ಲೇ ಉಳಿಯುತ್ತೇನೆ. ಆದರೆ, ಬೇರೆಯವರ ವಿಷಯ ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ಎಲ್ಲಾ ನಾಯಕರನ್ನು ಭೇಟಿ ಮಾಡುತ್ತೇನೆ. ನಾಳೆ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಜತೆಯೂ ಸಮಾಲೋಚನೆ ನಡೆಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಹೊರಗಿನವರ ಹಸ್ತಕ್ಷೇಪ ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರು ಸಚಿವರಾಗಿ ಬೆಳಗಾವಿಗೆ ಬಂದರೆ ಸಂತೋಷ. ಆದರೆ, ಜಿಲ್ಲಾ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದರು.
ರಮೇಶ್ ಜಾರಕಿಹೊಳೆ ಅವರು ಬಿಜೆಪಿ ನಾಯಕರ ಸಂಪರ್ಕದಲ್ಲಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಆದರೆ, ನನ್ನನ್ನು ಯಾವ ಬಿಜೆಪಿ ನಾಯಕರೂ ಸಂಪರ್ಕಿಸಿಲ್ಲ. ಕಾಂಗ್ರೆಸ್ ಶಾಸಕರಾದ ನಾಗೇಂದ್ರ, ಗಣೇಶ್, ಎಂ.ಟಿ.ಬಿ.ನಾಗರಾಜ್ ಸೇರಿದಂತೆ ಅನೇಕರು ಮೊದಲಿನಿಂದಲೂ ಉತ್ತಮ ಸಂಬಂಧ ಹೊಂದಿದ್ದಾರೆ. ಈಗ ಅವರೆಲ್ಲಾ ಒಂದು ಗುಂಪಾಗಿ ಒಗ್ಗಟ್ಟಾಗಿದ್ದಾರೆ. ಅದು ಪಕ್ಷ ವಿರೋಧಿ ಚಟುವಟಿಕೆ ಎಂದು ಭಾವಿಸಬೇಕಿಲ್ಲ ಎಂದರು.